Home ಜಿಲ್ಲೆ ಮಂಗಳೂರು ಉಡುಪಿ: ಉಸ್ತುವಾರಿ ಸಚಿವ ಯುಟಿ ಖಾದರ್ ರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಉಡುಪಿ: ಉಸ್ತುವಾರಿ ಸಚಿವ ಯುಟಿ ಖಾದರ್ ರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಉಡುಪಿ-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ನಗರದ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ಸಭೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಸಿದ್ಧತೆಗಳು ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ವಿಧಾನಸಭಾ ಕ್ಷೇತ್ರದ ಕರಾವಳಿ ಪ್ರದೇಶಗಳಾದ ಹೆಜಮಾಡಿ, ನಡಿಪಟ್ಟ, ಕಾಡಿಪಟ್ಟಿ, ಮೂಳೂರು, ತೊಟ್ಟಂ ಹಾಗೂ ಲೈಟ್‌ಹೌಸ್ ಭಾಗಗಳಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ತಡೆಯಲು ತುರ್ತು ಅನುದಾನ ಮಂಜೂರು ಮಾಡಿ ಸಮುದ್ರ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು.
ಗ್ರಾಮೀಣ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ಧಿಗೆ ಪ್ರಾಕೃತಿಕ ವಿಕೋಪ ನಿಧಿಯಡಿ ಅನುದಾನ ಬಿಡುಗಡೆ ಮಾಡಬೇಕು. ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಹುದ್ದೆ ಖಾಲಿ ಇರುವುದರಿಂದ ವೈದ್ಯಕೀಯ ತುರ್ತು ಪ್ರಕರಣಗಳಲ್ಲಿ ಬಿ.ಪಿ.ಎಲ್. ಪಡಿತರ ಚೀಟಿ ಮಂಜೂರಾತಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪ್ರಾಧಿಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಇದೇ ವೇಳೆ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೇಲ್ದಾವಣಿ ದುರಸ್ತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹಾಗೂ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಟ್ಟಡಗಳ ದುರಸ್ತಿಗೆ ಪ್ರಾಕೃತಿಕ ವಿಕೋಪ ನಿಧಿಯಡಿ ಅನುದಾನ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.