
ಸಂಜೆವಾಣಿ ನ್ಯೂಸ್
ಮೈಸೂರು: ಏ.07:- ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಈ ಬಾರಿ ಏ.20ರಂದು ರಾಜ್ಯ ಮಟ್ಟದ ಬಸವ ಜಯಂತಿ ಆಚರಿಸಲಾಗುವುದು. ಅಧಿಕಾರಿಗಳು ಬಸವ ಜಯಂತಿ ಕಾರ್ಯಕ್ರಮಗಳನ್ನು ವಿನೂತನವಾಗಿ ಯೋಜಿಸಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ.ಜಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಸವ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಪುತ್ಥಳಿಗೆ ಮಾಲಾರ್ಪಣೆ, ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ಪ್ರತಿ ವರ್ಷ ಆಯೋಜಿಸಲಾಗುವುದು. ಈ ಬಾರಿ ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು ಹೊಸತನದಿಂದ ಹಾಗೂ ಹೆಚ್ಚು ಜನರಿಗೆ ಬಸವಣ್ಣನವರ ತತ್ವ ಹಾಗೂ ಆದರ್ಶ ತಲುಪುವ ರೀತಿ ನಡೆಸಲು ಅಪರ ಜಿಲ್ಲಾಧಿಕಾರಿ ಯೋಜನೆ ರೂಪಿಸಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಶಿಷ್ಠಾಚಾರದ ಪ್ರಕಾರ ಎಲ್ಲರನ್ನೂ ಆಹ್ವಾನಿಸಿ ಜಯಂತಿಯನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಬಸವ ಬಳಗ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಒಕ್ಕೂಟದ ವತಿಯಿಂದ ಬಸವ ಜಯಂತಿ ಅಂಗವಾಗಿ ಏಪ್ರಿಲ್ 19 ರಂದು ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಲಾಮಂದಿರದಲ್ಲಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ನಾಟಕ ಪ್ರದರ್ಶನ ಹಾಗೂ ಏಪ್ರಿಲ್ 20 ರಂದು ಸಂಜೆ ಸಮಾರೋಪ ಸಮಾರಂಭದ ನಡೆಯಲಿದೆ ಎಂದರು.
ಬಸವ ಬಳಗ ಒಕ್ಕೂಟದ ಮೆರವಣಿಗೆ ಸಮಿತಿ ಅಧ್ಯಕ್ಷ ಹಾಗೂ ಮಾಜಿ ನಗರಪಾಲಿಕೆ ಸದಸ್ಯ ಕೆ.ಬಿ.ಮಲ್ಲೇಶ್ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬಸವ ಜಯಂತಿಯ ದಿನದಂದು ಬಸವಣ್ಣನವರ ಪುತ್ಥಳಿಯ ಶಂಕುಸ್ಥಾಪನೆ ಮಾಡುವುದು ಉತ್ತಮ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಯತ್ನಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಎಎಸ್‍ಪಿ ಮಲ್ಲಿಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.























