
ನವದೆಹಲಿ, .ಆ.14-,ದೇಶಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕ ಸೇರಿ ದೇಶದ 14ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸಕ್ರಿಯ ವಾಯುಭಾರ ವ್ಯವಸ್ಥೆಯ ಕಾರಣದಿಂದಾಗಿ ಚತ್ತೀಸ್‍ಗಢ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ ಹಾಗೂ ಮಧ್ಯಪ್ರದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರೊಂದಿಗೆ ಉತ್ತರ ಭಾರತದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ದೆಹಲಿ-ಎನ್‍ಸಿಆರ್, ಹರಿಯಾಣ ಹಾಗೂ ಪಂಜಾಬ್‍ನಲ್ಲಿಯೂ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಪಶ್ಚಿಮ ಹಾಗೂ ದಕ್ಷಿಣ ಭಾರತದ ಮಹಾರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಸತತವಾಗಿ ಮಳೆ ಮುಂದುವರಿಯಲಿದ್ದು, ಸಾರ್ವಜನಿಕರು ಮತ್ತು ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಭೂಕುಸಿತ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿರುವುದರಿಂದ ಹವಾಮಾನ ಇಲಾಖೆಯು ಆಯಾ ರಾಜ್ಯಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದಾಗಿ ಹಲವು ಕಡೆ ಸಂಚಾರ ವ್ಯತ್ಯಯ ಉಂಟಾಗಿದ್ದು, ಅಪಾಯಕಾರಿ ಹಾಗೂ ತಗ್ಗು ಪ್ರದೇಶಗಳ ಸಾರ್ವಜನಿಕರು ಸ್ಥಳೀಯ ಆಡಳಿತ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ವಿನಂತಿಸಲಾಗಿದೆ.




























