
ಸಂಜೆವಾಣಿ ವಾರ್ತೆ
ಹುಣಸೂರು,ಅ.28-ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಂಘಟನಾ ಸೃಜನ್ ಅಭಿಯಾನ-2 ಆರಂಭಿಸಲಾಗಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ವೀಕ್ಷಕ ಮುದ್ದು ಹನುಮೇಗೌಡ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಸಂಘಟನಾ ಸೃಜನ್ ಅಭಿಯಾನ-2 ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಹುಣಸೂರು ತಾಲೂಕಿನಲ್ಲಿ ಪಕ್ಷದ ಸಂಘಟನೆ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಸಮಗ್ರ ಮಾಹಿತಿ ನೀಡಿದ್ದಾರೆ.
ಚುನಾವಣೆಯಲ್ಲಿ ಸೋಲು-ಗೆಲುವಿಗಿಂತ ಪಕ್ಷದ ಸಂಘಟನೆ ಮುಖ್ಯವಾಗಿದ್ದು, ಸಂಘಟನೆ ಬಲವಾಗಿಲ್ಲದಿದ್ದರೆ ಸಣ್ಣಪುಟ್ಟ ಚುನಾವಣೆಗಳಲ್ಲಿಯೂ ಗೆಲುವು ಸಾಧಿಸುವುದು ಕಷ್ಟ. ಆದ್ದರಿಂದ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜ್ ಮಾತನಾಡಿ, ಬೂತ್ನಿಂದ ಜಿಲ್ಲಾ ಮಟ್ಟದವರೆಗೆ ರಚಿಸಿರುವ ಪಕ್ಷದ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟಿತವಾಗಿ ಶ್ರಮಿಸಬೇಕು. ಬೂತ್ ಮಟ್ಟದ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿ ಎಚ್.ಪಿ.ಮಂಜುನಾಥ್ ಅವರ ಕೈ ಬಲಪಡಿಸಬೇಕು ಎಂದರು.
ಈಗಾಗಲೇ ಬ್ಲಾಕ್ ಮಟ್ಟದಲ್ಲಿ ಹಲವು ಸಮಿತಿಗಳನ್ನು ರಚಿಸಲಾಗಿದ್ದರೂ ಕೆಲವು ಸಮಿತಿಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಸಕ್ರಿಯವಾಗಿ ಕೆಲಸ ಮಾಡುವ ಪದಾಧಿಕಾರಿಗಳನ್ನು ಗುರುತಿಸಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಕೆ.ಪಿ.ಸಿ.ಸಿ ಅಧ್ಯಕ್ಷರ ನಿರ್ದೇಶನದಂತೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಕ್ಟೋಬರ್ 31ರೊಳಗೆ ಮೈಸೂರು ಜಿಲ್ಲೆಯ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಾಗುವುದು. ಎಚ್.ಪಿ.ಮಂಜುನಾಥ್ ಹಾಗೂ ಪಕ್ಷದ ಮುಖಂಡರೊಂದಿಗೆ ಸಮಾಲೋಚಿಸಿ ಉತ್ತಮ ಬ್ಲಾಕ್ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.
ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಉತ್ತಮ ಅವಕಾಶ: ಮಂಜುನಾಥ್
ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮರೆಯಬಾರದು. ಪಕ್ಷದ ಬಗ್ಗೆ ಬದ್ಧತೆ, ಸಿದ್ಧಾಂತ ಹಾಗೂ ಕಾಳಜಿ ಹೊಂದಿರುವವರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು.
ಅಧಿಕಾರ ದೊರೆಯುವುದು ತಡವಾದರೂ ನಿಷ್ಠೆಯಿಂದ ದುಡಿಯುವವರಿಗೆ ಪಕ್ಷದಲ್ಲಿ ಸೂಕ್ತ ಅವಕಾಶಗಳು ಸಿಗಲಿವೆ ಎಂದರು. ತಮ್ಮ ತಂದೆಯೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದು, ಹುಣಸೂರಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಸಂದರ್ಭದಲ್ಲಿ ಕಾಂಗ್ರೆಸ್ ದುರ್ಬಲ ಸ್ಥಿತಿಯಲ್ಲಿತ್ತು. ಆ ಸಂದರ್ಭದಲ್ಲಿ ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷವನ್ನು ಪುನರ್ ಸಂಘಟಿಸಿದ ಪರಿಣಾಮ ಮೂರು ಬಾರಿ ಶಾಸಕನಾಗಲು ಸಾಧ್ಯವಾಯಿತು ಎಂದು ಸ್ಮರಿಸಿದರು.
ಪ್ರಸ್ತುತ ರಾಜಕೀಯ ಅಧಿಕಾರದ ಆಸೆ ಇಲ್ಲದಿದ್ದರೂ ತಮ್ಮನ್ನು ನಂಬಿರುವ ಕಾರ್ಯಕರ್ತರಿಗಾಗಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ಕಾರ್ಯಕರ್ತರು ನಿಷ್ಠೆ ಹಾಗೂ ಬದ್ಧತೆಯಿಂದ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಸಂಘಟಿತರಾಗಲಿ
ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ನ ನೂತನ ಅಧ್ಯಕ್ಷ ಬೀರಿಹುಂಡಿ ಬಸವಣ್ಣ ಮಾತನಾಡಿ, ಕ್ಷೇತ್ರದಲ್ಲಿ ಶಾಸಕರು ಅಧಿಕಾರದಲ್ಲಿದ್ದಾಗ ಹಾಗೂ ಇಲ್ಲದಿದ್ದಾಗ ಕಾರ್ಯಕರ್ತರು ಎದುರಿಸುವ ಸಮಸ್ಯೆಗಳ ಅರಿವು ಎಲ್ಲರಿಗೂ ಇದೆ. ಅಧಿಕಾರದ ಮಹತ್ವವನ್ನು ಅರಿತು ಪಕ್ಷ ಸಂಘಟನೆಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.
ಹುಣಸೂರು ಕ್ಷೇತ್ರದಲ್ಲಿ ಎಚ್.ಪಿ.ಮಂಜುನಾಥ್ ಅವರ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಹಾಗೂ ಮಂಜುನಾಥ್ ಅವರ ಕೈ ಬಲಪಡಿಸಲು ಕಾರ್ಯಕರ್ತರು ಶಕ್ತಿಯುತವಾಗಿ ಮತ್ತು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್.ಟಿ ಘಟಕದ ಅಧ್ಯಕ್ಷ ಸಿದ್ದರಾಜು, ಕಾನೂನು ವಿಭಾಗದ ಕಾಂತರಾಜ್, ಡಿ.ಸಿ.ಸಿ ಕಾರ್ಯದರ್ಶಿ ನಾಗೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ, ತಾಲೂಕು ಕಾಂಗ್ರೆಸ್ ಕಾರ್ಯಾಧ್ಯಕ್ಷ ಗದ್ದಿಗೆ ದೇವರಾಜ್, ಬಿಳಿಕೆರೆ ಬ್ಲಾಕ್ ಅಧ್ಯಕ್ಷ ಪ್ರೇಮ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರಾಘು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಡಿ.ಕೆ.ಕುನ್ನೇಗೌಡ, ಅಕ್ರಮ-ಸಕ್ರಮ ಸಮಿತಿಯ ಮಾಜಿ ಸದಸ್ಯ ಚಿಕ್ಕಸ್ವಾಮಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ವೆಳ್ಳಾಂಗಿರಿ, ಪಕ್ಷದ ನಿಕಟಪೂರ್ವ ಕಾರ್ಯಾಧ್ಯಕ್ಷ ಹಾಗೂ ವಕೀಲ ಪುಟ್ಟರಾಜು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
























