
ಉಡುಪಿ-ರೌಡಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕ ಡಾ.ಎಂ.ಎ.ಸಲೀಂ ಸೂಚಿಸಿದ್ದಾರೆ.
ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ಹೆಚ್ಚಿನ ಒತ್ತು ನೀಡಬೇಕು. ಈ ಬಗ್ಗೆ ಪೊಲೀಸರು ಕೈಗೊಂಡ ಕ್ರಮ ಶ್ಲಾಘಿನೀಯ. ಇದೇ ರೀತಿ ಮುಂದುವರೆಸಿಕೊಂಡು ಹೋಗಬೇಕು. ಸೊತ್ತು ಕಳವು ಪ್ರಕರಣಗಳನ್ನು ಪತ್ತೆ ಹಚ್ಚುವ ಜೊತೆಗೆ ತಡೆಗಟ್ಟುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಪರಾಧ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು ಎಂದು ಅವರು ಸೂಚಿಸಿದರು.
“ಸಮುದಾಯ ಪೊಲೀಸ್’ ವ್ಯವಸ್ಥೆಗಳಾದ ಮನೆ-ಮನೆಗೆ ಪೊಲೀಸ್, ಸ್ಪಂದನ, ಮಕ್ಕಳ ಸಹಾಯವಾಣಿಗಳನ್ನು ಕೂಡ ಬಲಪಡಿಸಬೇಕು.. ಉಡುಪಿ ಜಿಲ್ಲಾ ನಾಗರೀಕರು ಸುಶಿಕ್ಷಿತರಿದ್ದು, ಶಾಂತಿ ಪ್ರೀಯರಾಗಿದ್ದಾರೆ. ಶೈಕ್ಷಣಿಕವಾಗಿ ಉಡುಪಿ ಜಿಲ್ಲೆಯು ಹೇಗೆ ಮಂಚೂಣಿಯಲ್ಲಿದೆಯೋ ಅದೇ ರೀತಿ ಉಡುಪಿ ಜಿಲ್ಲಾ ಪೊಲೀಸರು ಕೂಡ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಾದರಿ ಪೊಲೀಸ್ ಆಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಅವರು ಸಲಹೆ ನೀಡಿದರು.
“ಆಸರೆ” ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಎಸ್.ಪಿ. ಆಗಿದ್ದ ವೇಳೆಯಲ್ಲಿ ತಾನು ಪರಿಚಯಿಸಿದ್ದು, ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಇದನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಿರುವುದು ಶ್ಲಾಘನೀಯ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್ ಸ್ವಾಗತಿಸಿ, ವಂದಿಸಿದರು.
ಇದಕ್ಕೂ ಮುನ್ನಾ ಪೊಲೀಸ್ ಮಹಾನಿರೀಕ್ಷಕ ಡಾ.ಎಂ.ಎ.ಸಲೀಂ ಉಡುಪಿ ಜಿಲ್ಲೆಯ ಕರಾವಳಿ ಕಾವಲು ಪಡೆ, ಮಲ್ಪೆ ಹಾಗೂ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರೀಕ್ಷಕ(ಒ.ಪಿ.ಎಸ್.) ವಿಕಾಸ್ ಕುಮಾರ್ ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಯವರು ಉಪಸ್ಥಿತರಿದ್ದರು.

























