
ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಘಟನೆ ನಡೆದಿದೆ.
ದಿನಾಂಕ ಆಗಸ್ಟ್ ೨೭, ೨೦೨೬ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದ್ದು, ಘಟನೆಯಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ತಿಳಿದುಬಂದಿದೆ.
ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.
ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಬಳಿಕ ಕುಟುಂಬಸ್ಥರು ಮುಂದಿನ ಕಾನೂನು ಪ್ರಕ್ರಿಯೆಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮಗಳು ಮುಂದುವರಿದಿವೆ ಎಂದು ಮಾಹಿತಿ ಲಭ್ಯವಾಗಿದೆ.


































