Home ಜಿಲ್ಲೆ ನಿವೇಶನ ರಹಿತರಿಗೆ ನಿವೇಶನ ನೀಡಲು-ಕರವೇ ಸ್ವಾಭಿಮಾನಿ ಸೇನೆ ಆಗ್ರಹ

ನಿವೇಶನ ರಹಿತರಿಗೆ ನಿವೇಶನ ನೀಡಲು-ಕರವೇ ಸ್ವಾಭಿಮಾನಿ ಸೇನೆ ಆಗ್ರಹ

ಸಂಜೆವಾಣಿ ವಾರ್ತೆ

ಹೊಸಪೇಟೆ.ಆ.5 ತಾಲೂಕಿನಲ್ಲಿ ಕಡು ಬಡವರು ಹಾಗೂ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಒತ್ತಾಯಿಸಿದೆ.

ಈ ಕುರಿತು ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದ, ಸ್ವಾಭಿಮಾನಿ ಸೇನೆ ಕಾರ್ಯಕರ್ತರು ನಂತರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಸರ್ಕಾರ ನಿವೇಶನ ರಹಿತರಿಗೆ ನಿವೇಶನ ನೀಡುವ ಕುರಿತಂತೆ ಕಳೆದ ವರ್ಷವೇ ಸಾರ್ವಜನಿಕರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದೆ. ಸಾಕಷ್ಟು ಬಡವರು ಹಾಗೂ ನಿವೇಶನ ರಹಿತರು ಅರ್ಜಿ ಹಾಕಿದ್ದಾರೆ. ಆದರೆ ಈವರೆಗೆ ಅರ್ಜಿ ಹಾಕಿದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಿಲ್ಲ.

ಈ ಹಿನ್ನಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ, ಶೀಘ್ರವೇ ಅರ್ಜಿ ಹಾಕಿದ ಫಲಾನುಭವಿಗಳಿಗೆ ನಿವೇಶನ ವಿತರಿಸುವಂತೆ ಹಾಗೂ ನಿವೇಶನ ಹಂಚಿಕೆ ಸಂದರ್ಭದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದಿರುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಸರ್ಕಾರಿ ಜಮೀನು ಕಬಳಿಕೆ: ನಗರದಲ್ಲಿ ಸರ್ಕಾರಿ ಜಮೀನನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಕಬಳಿಕೆ ಮಾಡುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಇದಕ್ಕೆ ಕಡಿವಾಣ ಹಾಕುವಂತೆ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ನಗರದ ಕೆಲವೊಂದು ಪ್ರದೇಶಗಳಲ್ಲಿ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಸ್ಥಳೀಯ ಖಾಸಗಿ ವ್ಯಕ್ತಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಕೆ ಮಾಡುತ್ತಿದ್ದಾರೆ. ಈ ಕುರಿತಂತೆ ನಗರಸಭೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸರ್ಕಾರಿ ಜಮೀನು ಕಬಳಿಸುವವರ ವಿರುದ್ದ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಎನ್.ಹೆಚ್.ಶ್ರೀನಿವಾಸ, ಸಲೀಂ, ಜಾಫರ್, ಭರತ್ ಸಿ.ಆರ್. ರಾಮಕೃಷ್ಣ, ಪ್ರಶಾಂತ್, ಶಬ್ಬೀರ್, ಸುವರ್ಣ, ಭಾನು, ನಾಗವೇಣಿ ಸೇರಿದಂತೆ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಭಾಗವಹಿಸಿದ್ದರು.