ಪಂಚಾಯತಿ ಮಟ್ಟದಲ್ಲೆ ಸಮಸ್ಯೆ ಬಗೆಹರಿಸಿ: ಮಂಜು

ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜೂ.09:
ಗ್ರಾಮ ಪಂಚಾಯಿತಿ ಮಟ್ಟದ ಸಮಸ್ಯೆಗಳನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮೂರು ತಿಂಗಳಿಗೊಮ್ಮೆ ಕೆಡಿಪಿ ಸಭೆ ನಡೆಸುವ ಮೂಲಕ ಬಗೆಹರಿಸಿದರೆ ಶಾಸಕರಿಗೆ ಹಾಗೂ ಇತರೆ ಜನಪ್ರತಿನಿಧಿಗಳಿಗೆ ಒತ್ತಡ ಕಡಿಮೆಯಾಗುತ್ತದೆ ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು.


ಅವರು ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಕೆ.ಡಿ.ಪಿ.ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಣ್ಣ ಚರಂಡಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆಗಳಿಗೂ ಶಾಸಕರನ್ನು ಹೊಣೆ ಮಾಡಬಾರದು. ಅದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಜವಾಬ್ದಾರಿಯಾಗಿರುತ್ತದೆ


ಅರಣ್ಯ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಪಶು ಆಸ್ಪತ್ರೆ ವೈದ್ಯರು ಹೀಗೆ ಎಲ್ಲಾ ಇಲಾಖೆಗಳ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಇಲಾಖೆ ಅಥವಾ ಸಂಸ್ಥೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಬೇಕು. ಗೈರು ಹಾಜರಾದವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವ ಹಕ್ಕು ಕೆಡಿಪಿ ಸಭೆಯ ಅಧ್ಯಕ್ಷರಾದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಇರುತ್ತದೆಂದು ತಿಳಿಸಿದರು.


ಬಲ್ಲೇನಹಳ್ಳಿ ಗ್ರಾಪಂ ಅಧ್ಯಕ್ಷೆ ಸೌಮ್ಯ ಪುಟ್ಟೇಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಯೋಜನಾಧಿಕಾರಿ ಮೋದೂರು ಶ್ರೀನಿವಾಸ್, ಉಪಾಧ್ಯಕ್ಷೆ ಸವಿತಾ, ಪಿಡಿಒ ಕೆ.ಎಂ.ರಚನಾ, ಸದಸ್ಯರಾದ ನಂದೀಶ್, ಎಂ.ಕೆ.ಯೋಗೇಂದ್ರ, ದೊಡ್ಡಗಾಡಿಗನಹಳ್ಳಿ ಪ್ರಶಾಂತ್‍ಕುಮಾರಿ, ಕುಮಾರ್, ಕಾಶಿಮುರುಕನಹಳ್ಳಿ ಚಂದ್ರಶೇಖರ್, ಗೀತಾ, ಚೇತನಾ ಬೋರೇಗೌಡ, ಪಲ್ಲವಿ, ವೈದ್ಯಾಧಿಕಾರಿ ಡಾ.ಯೋಜನ್,ಶಾಸಕರ ಆಪ್ತ ಸಹಾಯಕರಾದ ಅರಳಕುಪ್ಪೆ ಪ್ರತಾಪ್,ಧ್ರುವಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ಅಂಗನವಾಡಿಗಳು, ಆಶಾ, ಆರೋಗ್ಯ ಕಾರ್ಯಕರ್ತೆಯರು, ಸೊಸೈಟಿಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ವಿವಿಧ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು