Home ಜಿಲ್ಲೆ ಮಂಗಳೂರು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು-ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಹಾಗೂ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಕೇರಳದ ವರ್ಕಾಡಿಯ ವಯಾ ಮಂಜೇಶ್ವರ ನಿವಾಸಿ ಮೊಹಮ್ಮದ್ ಇರ್ಷಾದ್(೩೦) ಹಾಗೂ ಕೇರಳದ ಕಣ್ಣೂರು ತಾಳಿಪರಂಬ ಮೂಲದ ಪ್ರಸ್ತುತ ಮಂಗಳೂರು ಕೊಂಚಾಡಿ ನಿವಾಸಿ ನಿತಿನ್ ಕೃಷ್ಣನ್(೨೭) ಬಂಧಿತ ಆರೋಪಿಗಳು.
ಮೊದಲ ಪ್ರಕರಣದಲ್ಲಿ, ಆ. ೧೮ ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೇಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ, ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಖಚಿತ ಮಾಹಿತಿ ದೊರೆತಿರುತ್ತದೆ. ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಆರೋಪಿ ಮೊಹಮ್ಮದ್ ಇರ್ಷಾದ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಆರೋಪಿಯ ಬಳಿಯಿದ್ದ ಅಂದಾಜು ೧,೩೬,೦೦೦ ರೂ. ಮೌಲ್ಯದ ೧೩.೬೯ ಗ್ರಾಂ ತೂಕದ ಎಂಡಿಎಂಎ, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ೨,೯೪,೫೦೦ ರೂ. ಆಗಿರುತ್ತದೆ.
ಆರೋಪಿ ಇರ್ಷಾದ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎರಡನೇ ಪ್ರಕರಣದಲ್ಲಿ, ಆ.೧೭ ರಂದು ಗಾಂಜಾ ಸೇವನೆ ಮಾಡಿದ ಪ್ರಕರಣದಲ್ಲಿ ಆರೋಪಿತನಾದ ಆಶ್ವಿನ್ ಕ್ಸೇವಿಯರ್ (೨೪) ಎಂಬಾತನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್ ಎಂಬಾತನ ಬಗ್ಗೆ ಮಾಹಿತಿ ನೀಡಿರುತ್ತಾನೆ.
ಈ ಹಿನ್ನೆಲೆಯಲ್ಲಿ ಆ.೧೮ ರಂದು ಕದ್ರಿ ಗ್ರಾಮದ ಪದವು ಮೈದಾನದ ಬಳಿ ಇರುವ ಆಯುರ್ವೇದ ಕ್ಲಿನಿಕ್ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ನಿತಿನ್ ಕೃಷ್ಣನ್ ಎಂಬಾತನನ್ನು ಪತ್ತೆಹಚ್ಚಿ, ಆತನ ವಶದಲ್ಲಿದ್ದ ೬೦,೦೦೦ ರೂ. ಮೌಲ್ಯದ ೧.೨೦೬ ಕೆ.ಜಿ. ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಬೈಕ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಆರೋಪಿ ನಿತಿನ್ ಕೃಷ್ಣನ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರರು ಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.