Home ಜಿಲ್ಲೆ ಮೈಸೂರು ಮೈಸೂರಿನಲ್ಲಿ ರಾತ್ರಿ 1ರವರೆಗೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಸಿಎಂ ಸೂಚನೆ

ಮೈಸೂರಿನಲ್ಲಿ ರಾತ್ರಿ 1ರವರೆಗೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಸಿಎಂ ಸೂಚನೆ

ಸಂಜೆವಾಣಿ ನ್ಯೂಸ್
ಮೈಸೂರು.ಆ.09:
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹ, ಪ್ರವಾಸೋದ್ಯಮ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ. ಕೆ.ಬಿ. ಲಿಂಗರಾಜು ತಿಳಿಸಿದ್ದಾರೆ.


ಬೆಂಗಳೂರಿನ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗ, ಮೈಸೂರಿನಲ್ಲಿ ರಾತ್ರಿ ವ್ಯಾಪಾರಕ್ಕೆ ಅವಕಾಶ ನೀಡುವುದರಿಂದ ಆಗುವ ಅನುಕೂಲಗಳ ಕುರಿತು ವಿವರಿಸಿತು. ಮನವಿಯನ್ನು ಆಲಿಸಿದ ಸಿಎಂ, ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಪತ್ರ ಬರೆದು, ಸರ್ಕಾರದ ಆದೇಶದನ್ವಯ ಮೈಸೂರಿನಲ್ಲಿ ರಾತ್ರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಲಿಂಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶದ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯರಾತ್ರಿ 1ರವರೆಗೆ ವ್ಯಾಪಾರ ನಡೆಸಲು ಕಾರ್ಮಿಕ ಇಲಾಖೆ ಅವಕಾಶ ನೀಡಿದೆ. 10 ಅಥವಾ ಅದಕ್ಕಿಂತ ಹೆಚ್ಚಿನ ನೌಕರರನ್ನು ಹೊಂದಿರುವ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಅವಕಾಶವಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಈ ಆದೇಶದನ್ವಯ ರಾತ್ರಿ 1ರವರೆಗೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಆದರೆ, ಮೈಸೂರಿನಲ್ಲಿ ಈವರೆಗೆ ಆದೇಶ ಜಾರಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಇದೇ ವೇಳೆ ಸಿಎಂ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.


ಪ್ರವಾಸೋದ್ಯಮಕ್ಕೂ ಉತ್ತೇಜನ
ಮೈಸೂರಿನಲ್ಲಿ ರಾತ್ರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದರೆ ನಾಗರಿಕರು, ವ್ಯಾಪಾರಸ್ಥರು ಹಾಗೂ ಉದ್ಯಮಿಗಳಿಗೆ ಅನುಕೂಲವಾಗಲಿದೆ. ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ವಿದೇಶಗಳಿಂದಲೂ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಾರೆ.
ರಾತ್ರಿ ವೇಳೆ ವ್ಯಾಪಾರ ವಹಿವಾಟು ನಡೆಯುವುದರಿಂದ ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ದೊರೆಯಲಿದ್ದು, ವ್ಯಾಪಾರ ವಹಿವಾಟು ಹೆಚ್ಚಳದ ಜತೆಗೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ. ಪ್ರವಾಸೋದ್ಯಮದ ಮೂಲಕ ರಾಜ್ಯದ ಆದಾಯವೂ ಹೆಚ್ಚಲಿದೆ ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿತು.
ಮೈಸೂರು-ಬೆಂಗಳೂರು ದಶಪಥ ರಸ್ತೆ ನಿರ್ಮಾಣಗೊಂಡ ಬಳಿಕ ಎರಡೂ ನಗರಗಳ ನಡುವಿನ ಸಂಚಾರ ಹೆಚ್ಚಾಗಿದೆ. ಮೈಸೂರು ರಾಜಧಾನಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ನಗರವಾಗಿದ್ದು, ವ್ಯಾಪಾರ ಮತ್ತು ಕೈಗಾರಿಕಾ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಣುತ್ತಿದೆ. ಹೀಗಾಗಿ ರಾತ್ರಿ ವೇಳೆಯಲ್ಲೂ ನಗರಕ್ಕೆ ಸಾಕಷ್ಟು ಪ್ರಯಾಣಿಕರು ಆಗಮಿಸುತ್ತಿದ್ದು,


ರಾತ್ರಿ ವ್ಯಾಪಾರಕ್ಕೆ ಅವಕಾಶ ನೀಡುವ ಸರ್ಕಾರದ ಆದೇಶ ಜಾರಿಗೊಳಿಸುವುದು ಅಗತ್ಯವಾಗಿದೆ ಎಂದು ತಿಳಿಸಲಾಗಿದೆ.
ಮೈಸೂರಿನ ಅಭಿವೃದ್ಧಿಗೆ ಪೂರಕವಾಗಿರುವ ಈ ಕ್ರಮದ ಅನಿವಾರ್ಯತೆಯನ್ನು ಮನಗಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಲಿಂಗರಾಜು ತಿಳಿಸಿದ್ದಾರೆ.


ನಿಯೋಗದಲ್ಲಿದ್ದವರು
ಈ ಸಂದರ್ಭದಲ್ಲಿ ದೇವರಾಜ ಮಾರುಕಟ್ಟೆ ಸಂಘದ ಅಧ್ಯಕ್ಷ ಎಸ್. ಮಹದೇವು, ರಾಜ್ಯ ಪೆಟ್ರೋಲಿಯಂ ಉತ್ಪನ್ನಗಳ ಸಂಘದ ಕೆ.ಎಂ. ಬಸವೇಗೌಡ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷ ಆರ್.ಆನಂದ್, ಕಾರ್ಯದರ್ಶಿ ಶಿವಾಜಿರಾವ್, ಖಜಾಂಚಿ ಎಸ್.ಜೆ. ಅಶೋಕ್, ನಿರ್ದೇಶಕರಾದ ಎಂ.ಸಿ. ಬನ್ಸಾಲಿ, ಪಿ. ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.