ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ

ಸಂಜೆವಾಣಿ ವಾರ್ತೆ

ಬಳ್ಳಾರಿ, ಫೆ.23: ರಾಜ್ಯದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಬಳ್ಳಾರಿ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಿ ಆಗ್ರಹಿಸಿತು.

ನಂತರ ಜಿಲ್ಲಾಧಿಕಾರಿಗಳ ಮೂಲಕ  ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಅಧ್ಯಕ್ಷರಾದ ಎ.ಪಂಪಾಪತಿ ಕೋಳೂರು, ಮತ್ತು ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್ ಮಾತನಾಡಿ, ರಾಜ್ಯದ ೪೩ ಇಲಾಖೆಗಳಲ್ಲಿ ಖಾಲಿ ಇರುವ ೨,೮೪,೮೮೧ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು.ನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಮತ್ತು ಎಲ್ಲಾ ತೆರನಾದ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು.ನೇಮಕಾತಿಗಳಲ್ಲಿ ದುಬಾರಿ ಅರ್ಜಿ ಶುಲ್ಕ ಕೈಬಿಡಬೇಕು ಹಾಗೂ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಉದ್ಯೋಗಾವಕಾಶ ದೊರೆಯುವವರೆಗೆ ಗೌರವಯುತ ಜೀವನ ನಡೆಸಲು ಸೂಕ್ತವಾದ ನಿರುದ್ಯೋಗ ಭತ್ಯೆ ನೀಡಬೇಕು. ಕೆಪಿಎಸ್ಸಿಯಲ್ಲಿನ ಅಕ್ರಮ ತಡೆಗಟ್ಟಲು ರಾಜ್ಯ ಸರ್ಕಾರ ಹೋಟಾ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು. ಬಡಮಕ್ಕಳ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುವ ಹಾಗೂ ಶಿಕ್ಷಕ ಹುದ್ದೆಗಳನ್ನು ನಾಶಗೊಳಿಸುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ನೀತಿಯನ್ನು ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು..

ಈ ಸಂದರ್ಭದಲ್ಲಿ ಸದಸ್ಯರಾದ ಪ್ರಮೋದ್, ತಿರುಮಲ ರೆಡ್ಡಿ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.