
ವಿಟ್ಲ-ರಸ್ತೆ ದಾಟುತ್ತಿದ್ದ ೯ನೇ ತರಗತಿಯ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರ ಗಾಯಗೊಂಡು ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ನೆಟ್ಲಮೂಡೂರು ಗ್ರಾಮದ ನೇರಳೆಕಟ್ಟೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ೧೪ ವರ್ಷದ ಫಾತಿಮಾ ಇಝಾಹಾ ಇಲ್ಯಾಸ್ ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಫಾತಿಮಾ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ವೇಳೆ, ಮಾಣಿ ಕಡೆಯಿಂದ ಬಂದ ಲಾರಿಯೊಂದು ಬಾಲಕಿಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಗುಜರಾತ್ನ ಅರುವಳ್ಳಿ ನಿವಾಸಿ ಕೊಕಾಡಿ ಮೊಹಮ್ಮದ್ ಜನಾಫ್ ರೆಹಮಾನ್ಬಾಯ್ (೩೦) ಎಂಬಾತ ಅತೀ ವೇಗ ಮತ್ತು ದುಡುಕುತನದಿಂದ ಲಾರಿಯನ್ನು ಚಲಾಯಿಸಿಕೊಂಡು ಬಂದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಆಕೆ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನ ವಿರುದ್ಧ ತನಿಖೆ ಕೈಗೊಂಡಿದ್ದಾರೆ.





















