
ಸಂಜೆವಾಣಿ ನ್ಯೂಸ್
ಮೈಸೂರು ಆ.25:- ಕಬಿನಿ ಜಲಾಶಯ ಭರ್ತಿಯಾಗಿದ್ದರೂ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಬದಲಿಗೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಮೂಲಕ `ನೀರಗಂಟಿ’ ಕೆಲಸ ಮಾಡುತ್ತಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದಲ್ಲಿ ನೂತನ ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ವಲಯ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಬೆಂಬಲ ಬೆಲೆ ಕೊರತೆ, ಬ್ಯಾಂಕುಗಳ ಕಠಿಣ ಸಾಲ ನೀತಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ರೈತರಿಗೆ ಆಗುತ್ತಿರುವ ಕಿರುಕುಳದ ವಿರುದ್ಧ ಹೋರಾಡಲು ಗ್ರಾಮ ಘಟಕ ಆರಂಭಿಸಲಾಗಿದೆ ಎಂದು ಹೇಳಿದರು.
ರೈತ ಸಂಘಟನೆಗಳಲ್ಲಿನ ಒಡಕೇ ಸರ್ಕಾರಗಳ ನಿರ್ಲಕ್ಷ್ಯಕ್ಕೆ ಕಾರಣ. ಜಾತಿ, ಪಕ್ಷ ಮರೆತು ರೈತ ಸಮುದಾಯದ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ನೂರಾರು ರೈತರಿಗೆ ಹಸಿರು ಶಾಲು ಹೊದಿಸಿ ಸ್ವಾಗತಿಸಲಾಯಿತು. ಕೃಷಿ ಸೌಲಭ್ಯಗಳು, ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಉಪಾಧ್ಯಕ್ಷ ನೀಲಕಂಠಪ್ಪ, ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ತಾಲೂಕು ಅಧ್ಯಕ್ಷ ಪೈಲ್ವಾನ್ ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ವರಕೋಡು ನಾಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

































