Home ಸುದ್ದಿ ರಾಜ್ಯ ೮ ಭೂ ದಾಖಲೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾ ದಾಳಿ

೮ ಭೂ ದಾಖಲೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾ ದಾಳಿ

ಚಿಕ್ಕಮಗಳೂರು , ನ.೨೪-ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು, ೮ ತಾಲೂಕುಗಳ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ನಿರಂತರವಾಗಿ ಲೋಕಾಯುಕ್ತ ಕಚೇರಿಗೆ ಭ್ರಷ್ಟಾಚಾರದ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ನಂದಿನಿ ನೇತೃತ್ವದಲ್ಲಿ ೮ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಕಚೇರಿಗಳಲ್ಲಿ ದಾಖಲೆಗಳ ತಪಾಸಣೆ ನಡೆಸಿವೆ.
ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲದೆ, ಈ ಸಂಬಂಧ ಲೋಕಾಯುಕ್ತ ಕಚೇರಿಗೆ ನಿರಂತರವಾಗಿ ದೂರುಗಳು ಸಲ್ಲಿಕೆಯಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸುಮೋಟೋ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಡೂರು, ತರೀಕೆರೆ, ಶೃಂಗೇರಿ, ಅಜ್ಜಂಪುರ, ಕೊಪ್ಪ ಹಾಗೂ ನರಸಿಂಹರಾಜಪುರ ತಾಲೂಕಿನ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ನಂದಿನಿ ಅವರ ನೇತೃತ್ವದಲ್ಲಿ ಎಂಟು ಪ್ರತ್ಯೇಕ ತಂಡಗಳನ್ನು ರಚಿಸಿ ಏಕಕಾಲದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪ್ರತಿ ತಂಡವೂ ಆಯಾ ತಾಲೂಕಿನ ಕಚೇರಿಗಳಿಗೆ ತೆರಳಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿತು.
ಭೂಮಿ ಸರ್ವೆ, ಜಮೀನಿನ ದಾಖಲೆಗಳ ತಿದ್ದುಪಡಿ, ಸರ್ವೆ ಸಂಬಂಧಿತ ಅರ್ಜಿಗಳ ವಿಲೇವಾರಿ ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸಗಳಲ್ಲಿ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿದೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.