ಕಲಬುರಗಿ: ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಯುವಕರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ತಡೆಯುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಮಿತಿ ಜಿಲ್ಲಾ ಸಂಚಾಲಕ ಭೀಮಶಾ ಖನ್ನಾ, ರಾಜ್ಯ ಸಂಘಟನಾ ಸಂಚಾಲಕ ಸುರೇಶ್ ಮೆಂಗನ್, ವಿಭಾಗೀಯ ಸಂಚಾಲಕ ಧರ್ಮಣ್ಣ ಕೋಣೆಕರ್, ದೇವಿಂದ್ರ ಶೆಳ್ಳಗಿ, ಶಿವಕುಮಾರ ಆಜಾದಪೂರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.