
ಸಂಜೆವಾಣಿ ನ್ಯೂಸ್
ಮೈಸೂರು: ಮೇ.24:- ಹೆಚ್ಚು ಅನುಭವ ಹಾಗೂ ಹೆಚ್ಚು ಪರಿಣಿತಿ ಇರುವ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಇದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೇಟಗಳ್ಳಿ ಜಿಲ್ಲಾ ಆಸ್ಪತ್ರೆಯಲ್ಲಿ ಕಿಮೋಥೆರಪಿ ಆರೈಕೆ ಕೇಂದ್ರಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಮೈಸೂರಿನಲ್ಲಿ 20 ಬೆಡ್‍ಗಳ ಹಾಗೂ ಇತರೆಡೆ 10 ಬೆಡ್‍ಗಳ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳನ್ನು ಕಳೆದ ವರ್ಷದ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿತ್ತು. ಹಲವು ಜನ ಕ್ಯಾನ್ಸರ್ ಚಿಕಿತ್ಸೆಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕಿತ್ತು. ಇದನ್ನು ತಪ್ಪಿಸಲು ಕಿಮೋಥೆರಪಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರತಿ ವರ್ಷ 70 ಸಾವಿರ ಜನ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇವರೆಲ್ಲಾ ಚಿಕಿತ್ಸೆ ಪಡೆಯಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋಗಬೇಕಿತ್ತು. ಇವರಿಗೆ ಹತ್ತಿರದಲ್ಲಿ ಚಿಕಿತ್ಸೆ ನೀಡಲು 16 ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಕೇಂದ್ರಗಳನ್ನು ತೆರೆಯಲಾಗಿದೆ. ಕಿಮೊಥೆರಪಿ ಚಿಕಿತ್ಸೆ ಪಡೆದು 10, 15, ವರ್ಷ ಬದುಕಿದ್ದಾರೆ. ಕ್ಯಾನ್ಸರ್ ಬಂದರೆ ಯಾರು ದೃತಿಗೆಡಬಾರದು. ಪ್ರತಿಯೊಬ್ಬರೂ ವರ್ಷಕ್ಕೆ ಒಂದು ಬಾರಿ ಆದರೂ ದೇಹವನ್ನು ಪೂರ್ಣ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ನಾನು 2013ರಲ್ಲಿ ಅಧಿಕಾರಕ್ಕೆ ಬಂದಾಗ ಉಚಿತವಾಗಿ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಬಿಪಿಎಲ್ ಕಾರ್ಡ್‍ದಾರರಿಗೆ ನೀಡಲಾಗಿತ್ತು ಇದರ ಉದ್ದೇಶ ಯಾರು ಹಸಿವಿನಿಂದ ಮಲಗಬಾರದು. 2023ರಲ್ಲಿ ಅಧಿಕಾರಕ್ಕೆ ಬಂದಾಗ ಅದನ್ನು 10 ಕೆಜಿಗೆ ಹೆಚ್ಚಳ ಮಾಡಲಾಗಿದೆ. ಎಲ್ಲರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಸಮಾನವಾಗಿ ವೈದ್ಯಕೀಯ ಶಿಕ್ಷಣ ಹಾಗೂ ವೈದ್ಯಕೀಯ ಸೇವೆ ದೊರೆಯಬೇಕು. ಎಲ್ಲರೂ ಆರ್ಥಿಕವಾಗಿ ಸಬಲರಾಗಬೇಕು. ಹಿಂದೆ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ, ಜಯದೇವ ಆಸ್ಪತ್ರೆ ಇರಲಿಲ್ಲ. ನಾನು ಅಧಿಕಾರಕ್ಕೆ ಬಂದ ನಂತರ ಇವುಗಳನ್ನು ಮೈಸೂರಿನಲ್ಲಿ ಪ್ರಾರಂಭ ಮಾಡಿದೆನು. ಮೈಸೂರು ಜಿಲ್ಲಾ ಆಸ್ಪತ್ರೆಗೆ ಎಂಆರ್‍ಐ ಸ್ಕ್ಯಾನಿಂಗ್ ಸೌಲಭ್ಯ ನೀಡಲಾಗುತ್ತಿದೆ. ರಾಜ್ಯದ 240 ಕೇಂದ್ರಗಳಲ್ಲಿ ಡಯಾಲಿಸಿಸ್ ಚಿಕಿತ್ಸೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶಾಸಕ ಕೆ.ಹರೀಶ್ ಗೌಡ ಮಾತನಾಡಿ, ಮೈಸೂರು ನಗರದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ದೊರೆಯುವಂತೆ ಮಾಡಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ನಿಮಾನ್ಸ್ ಆಸ್ಪತ್ರೆ ಒಂದು ಮೈಸೂರಿಗೆ ಬಂದರೆ ಎಲ್ಲಾ ರೀತಿಯ ಆರೋಗ್ಯ ಸೇವೆ ದೊರೆತಂತೆ ಆಗುತ್ತದೆ. ಮಹಾರಾಣಿ ಹಾಸ್ಟೆಲ್‍ನಲ್ಲಿ ಈ ಹಿಂದೆ 300 ವಿದ್ಯಾರ್ಥಿನಿಯರಿಗೆ ಅವಕಾಶ ಇತ್ತು. ಈಗ 2900 ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಮೈಸೂರು ನಗರಕ್ಕೆ ಕಿದ್ವಾಯಿ ಆಸ್ಪತ್ರೆ ಮುಂದಿನ ದಿನಗಳಲ್ಲಿ ಬರುತ್ತದೆ ಎಂದು ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್ ಮಾತನಾಡಿ, ಇಂದು ನಾವು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಒಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸುತ್ತಿದ್ದೇವೆ. ಕ್ಯಾನ್ಸರ್ ರೋಗಿಗಳು ಕ್ಯಾನ್ಸರ್ ಆಸ್ಪತ್ರೆಗಳಿಗೆ ಬರಲು ನೂರಾರು ಕಿಲೋಮೀಟರ್‍ಗಳಿಂದ ಬಂದು ಚಿಕಿತ್ಸೆ ಪಡೆಯಬೇಕು. ಆದ್ದರಿಂದ ಕಿದ್ವಾಯಿ ಸಹಯೋಗದೊಂದಿಗೆ ಹಬ್ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ತಿಮ್ಮಯ್ಯ, ಡಾ.ಯತಿಂದ್ರ ಸಿದ್ದರಾಮಯ್ಯ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಮೈಸೂರು ನಗರ ಪೆÇಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.