
ಸಂಜೆವಾಣಿ ವಾರ್ತೆ
ಹುಣಸೂರು, ಅ.29-ಹಲವು ವರ್ಷಗಳಿಂದ ಜಮೀನು ಸಾಗುವಳಿ ಮಾಡಿಕೊಂಡು ಬರುತ್ತಿದ್ದ 187 ಬಡ ಕುಟುಂಬಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟಿರುವುದು ತೃಪ್ತಿ ತಂದಿದೆ ಎಂದು ಶಾಸಕ ಹರೀಶ್ ಗೌಡ ಸಂತಸ ವ್ಯಕ್ತಪಡಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ನಡೆದ ಅಕ್ರಮ-ಸಕ್ರಮ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ಕುಟುಂಬಗಳಿಗೆ ಜಮೀನಿನ ಅಧಿಕೃತ ಹಕ್ಕು ದೊರೆತರೆ ಆರ್ಥಿಕ ಭದ್ರತೆ ಸಿಗುವುದರ ಜತೆಗೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಹಲವು ವರ್ಷಗಳಿಂದ ಜಮೀನು ಸಾಗುವಳಿ ಮಾಡಿಕೊಂಡಿದ್ದರೂ ಅಧಿಕೃತ ದಾಖಲೆಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಗಳಿಗೆ ಹಕ್ಕು ದೊರಕಿಸಿಕೊಡುವುದು ಜನಪ್ರತಿನಿಧಿಯಾಗಿ ತಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ 187 ಕುಟುಂಬಗಳಿಗೆ ಸಾಗುವಳಿ ಚೀಟಿ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸರ್ಕಾರದ ವಿವಿಧ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದರ ಜತೆಗೆ ರೈತರು ಹಾಗೂ ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸಾಗುವಳಿ ಚೀಟಿ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ದಾಸನಪುರದ ಫಲಾನುಭವಿ ಹನುಮಂತಯ್ಯ, ಹಲವು ವರ್ಷಗಳ ನಿರೀಕ್ಷೆಯ ಬಳಿಕ ಭೂಮಿಯ ಹಕ್ಕು ದೊರೆತಿರುವುದು ನೆಮ್ಮದಿಯ ಜೀವನಕ್ಕೆ ದಾರಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿ ಶಾಸಕ ಹರೀಶ್ ಗೌಡ ಹಾಗೂ ಸಮಿತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಜೆ. ಮಂಜುನಾಥ್, ಸಮಿತಿ ಸದಸ್ಯರಾದ ಮಂಟಿಕೊಪ್ಪಲು ಕುಮಾರ್, ಗುಣಶೇಖರ್, ಲತಾ ಸೇರಿದಂತೆ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರು ಉಪಸ್ಥಿತರಿದ್ದರು.
























