ಖಾಸಗಿ ಬಸ್ ಭಸ್ಮ ೪೦ ಮಂದಿ ಪಾರು

ಬೆಂಗಳೂರು,ಫೆ.೬-ತುಮಕೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ.


ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.


ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಸುಮಾರು ೪೦ ಮಂದಿ ಪ್ರಯಾಣಿಕರಿದ್ದರು. ಬೆಂಕಿ ಕಾಣುತ್ತಿದ್ದಂತೆ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‌ನಿಂದ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಬೆಂಕಿಯ ತೀವ್ರತೆ ಹೆಚ್ಚಾಗಿ ಬಸ್ ಸಂಪೂರ್ಣ ಸುಟ್ಟುಹೋಗಿದೆ. ಸ್ಥಳಕ್ಕೆ ತಕ್ಷಣ ಆಗಮಿಸಿದ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅವಘಡ ತಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವುದರಿಂದ ಲಗೇಜ್ ಬಾಕ್ಸ್ ನಲ್ಲಿ ಇಟ್ಟಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿವೆ. ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡು ಪ್ರಯಾಣಿಕರು ಕಣ್ಣೀರಿಡುತ್ತಿದ್ದಾರೆ.