Home ಜಿಲ್ಲೆ ತುಮಕೂರು ಗ್ರಾಮೀಣ ಜನರಿಗಾಗಿ ಆಯುಷ್ಮಾನ್ ಆರೋಗ್ಯ ಮಂದಿರ ಸ್ಥಾಪನೆ: ಸಿಬಿಎಸ್

ಗ್ರಾಮೀಣ ಜನರಿಗಾಗಿ ಆಯುಷ್ಮಾನ್ ಆರೋಗ್ಯ ಮಂದಿರ ಸ್ಥಾಪನೆ: ಸಿಬಿಎಸ್

ಹುಳಿಯಾರು, ಮಾ. ೧೪- ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ೬೫ ಲಕ್ಷ ರೂ. ವೆಚ್ಚದಲ್ಲಿ ನೂತನ ’ಆಯುಷ್ಮಾನ್ ಆರೋಗ್ಯ ಮಂದಿರ’ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ಹೇಳಿದರು.


ಹುಳಿಯಾರು ಸಮೀಪದ ಚೌಳಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರೇನಹಳ್ಳಿ ಗೇಟ್ ಬಳಿ ನೂತನ ಆಯುಷ್ಮಾನ್ ಆರೋಗ್ಯ ಮಂದಿರದ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.


ಈ ಹಿಂದೆ ಆರೋಗ್ಯ ಇಲಾಖೆಯ ’ಉಪಕೇಂದ್ರಗಳೆಂದು ಕರೆಯಲ್ಪಡುತ್ತಿದ್ದ ಈ ಕೇಂದ್ರಗಳನ್ನು ಇನ್ನು ಮುಂದೆ ‘ಆಯುಷ್ಮಾನ್ ಆರೋಗ್ಯ ಮಂದಿರ’ ಎಂದು ಮರುನಾಮಕರಣ ಮಾಡಲಾಗಿದೆ. ತಾಲ್ಲೂಕಿನ ಒಟ್ಟು ಮೂರು ಉಪಕೇಂದ್ರಗಳ ಕಟ್ಟಡಕ್ಕೆ ಅನುಮೋದನೆ ದೊರೆತಿದ್ದು, ಸದ್ಯ ಚೌಳಕಟ್ಟೆ ಹಾಗೂ ಗೋಡೆಕೆರೆಯ ಸೋಮನಹಳ್ಳಿಗೆ ಮಂಜೂರಾತಿ ಸಿಕ್ಕಿದೆ. ಈ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಅಗತ್ಯವಾದ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಹಾಗೂ ವಿವಿಧ ವೈದ್ಯಕೀಯ ಸೇವೆಗಳು ಲಭ್ಯವಿರಲಿವೆ ಎಂದರು.


ನಮ್ಮ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಸಾರ್ವಜನಿಕರು ತಮ್ಮ ಗ್ರಾಮದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಮತ್ತು ಸರ್ಕಾರ ನೀಡುತ್ತಿರುವ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕರು ಇದೇ ಸಂದರ್ಭದಲ್ಲಿ ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ರಾಮಚಂದ್ರಯ್ಯ, ತಾಲ್ಲೂಕು ವೈದ್ಯಾಧಿಕಾರಿ ಡಾ.ಅಜಯ್, ಹಂದನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಶರತ್, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.