Home ಜಿಲ್ಲೆ ಬೆಂಗಳೂರು ಮಹಾನಗರ ಪಾಲಿಕೆ ನೌಕರರಿಗೆ ಆರೋಗ್ಯ ಸಂಜೀವಿನಿ

ಮಹಾನಗರ ಪಾಲಿಕೆ ನೌಕರರಿಗೆ ಆರೋಗ್ಯ ಸಂಜೀವಿನಿ

ಬೆಂಗಳೂರು, ಮಾ. ೧೬- ರಾಜ್ಯ ಸರ್ಕಾರದ ನೌಕರರಿಗೆ ನೀಡಲಾಗುತ್ತಿರುವ ಆರೋಗ್ಯ ಸಂಜೀವಿನಿ ವೈದ್ಯಕೀಯ ಸೌಲಭ್ಯವನ್ನು ಕರ್ನಾಟಕದ ಮಹಾನಗರ ಪಾಲಿಕೆಗಳ ಅಧಿಕಾರಿ ಹಾಗೂ ನೌಕರರಿಗೂ ವಿಸ್ತರಿಸುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.


ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಅಮೃತ್ ರಾಜ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಈ ತೀರ್ಪು ನೀಡಿದೆ.


ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರ್ಕಾರದ ನೌಕರರಂತೆ ಆರೋಗ್ಯ ಚಿಕಿತ್ಸಾ ಸೌಲಭ್ಯ ದೊರೆಯುತ್ತಿಲ್ಲ ಎಂಬ ಆಕ್ಷೇಪದ ಹಿನ್ನೆಲೆ ಈ ಅರ್ಜಿ ಸಲ್ಲಿಸಲಾಗಿತ್ತು. ಸಂಘದ ವಾದವನ್ನು ಆಲಿಸಿದ ನ್ಯಾಯಾಲಯ, ಎರಡು ತಿಂಗಳೊಳಗೆ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ಚಿಕಿತ್ಸಾ ಸೌಲಭ್ಯವನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.


ಕರ್ನಾಟಕದ ದಾವಣಗೆರೆ, ಮೈಸೂರು, ಬೆಳಗಾವಿ, ವಿಜಯಪುರ, ಮಂಗಳೂರು, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ಕಲಬುರಗಿ ಹಾಗೂ ತುಮಕೂರು ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಅಧಿಕಾರಿ ಮತ್ತು ನೌಕರರಿಗೆ ಈ ತೀರ್ಪಿನಿಂದ ಪ್ರಯೋಜನವಾಗಲಿದೆ.


ರಾಜ್ಯ ಸರ್ಕಾರಿ ನೌಕರರು, ಪೊಲೀಸ್ ಇಲಾಖೆ, ಕೆಎಸ್‌ಆರ್‌ಟಿಸಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನೌಕರರಿಗೆ ಜಾರಿಯಲ್ಲಿರುವಂತೆ ಮಹಾನಗರ ಪಾಲಿಕೆ ನೌಕರರಿಗೂ ಆರೋಗ್ಯ ಚಿಕಿತ್ಸಾ ಸೌಲಭ್ಯ ಒದಗಿಸುವಂತೆ ಹಲವು ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಸಕಾರಾತ್ಮಕ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಬೇಕಾಯಿತು ಎಂದು ಸಂಘದ ಅಧ್ಯಕ್ಷ ಅಮೃತ್ ರಾಜ್ ತಿಳಿಸಿದ್ದಾರೆ.


ಹೈಕೋರ್ಟ್ ನೀಡಿರುವ ಈ ತೀರ್ಪು ಮಹಾನಗರ ಪಾಲಿಕೆ ನೌಕರರಿಗೆ ದೊರೆತ ಐತಿಹಾಸಿಕ ವಿಜಯ ಎಂದು ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.