Home ಜಿಲ್ಲೆ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಮೊದಲ ಆದ್ಯತೆ

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಮೊದಲ ಆದ್ಯತೆ

ಗದಗ, ಮೇ 13: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಉಷ್ಣಾಂಶದ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಪ್ರಥಮ ಆದ್ಯತೆ ನೀಡಬೇಕು ಎಂದು ರಾಜ್ಯ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಡಾ. ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವರ್ಷಕ್ಕಿಂತ ಈ ಬಾರಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಎಲ್ಲ ತಾಲ್ಲೂಕು ಪಂಚಾಯತಿ ಇಓ ಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಅನಗತ್ಯ ನೀರಿನ ಪೆÇೀಲು ಹಾಗೂ ಅಪವ್ಯಯ ತಡೆಗಟ್ಟಿ ವರ್ಷಪೂರ್ತಿ ಸಮರ್ಪಕ ನೀರು ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ತಿಮ್ಮಾಪೂರ ಗ್ರಾಮ ಸೇರಿದಂತೆ ನೀರು ಸರಬರಾಜಿನಲ್ಲಿ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಗ್ರಾಮಗಳು ಹಾಗೂ ವಾರ್ಡುಗಳನ್ನು ಗುರುತಿಸಿ ಖಾಸಗಿ ಬೋರ್‍ವೆಲ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಇರುವ ಕೆರೆಗಳಲ್ಲಿ ನೀರು ಸಂಗ್ರಹಕ್ಕೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿರುವ ಆರ್‍ಓ ಘಟಕಗಳ ಸಮರ್ಪಕ ನಿರ್ವಹಣೆ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಡಾ. ಎಂ ವಿ ವೆಂಕಟೇಶ ಸೂಚಿಸಿದರು.

ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಸಮರ್ಪಕವಾಗಿ ನಡೆಯಬೇಕು, ಯಾವುದೇ ಕಾರಣಕ್ಕೂ ಬೀಜ ಹಾಗೂ ಗೊಬ್ಬರ ವಿತರಣೆಯಲ್ಲಿ ಅವ್ಯವಸ್ಥೆ ನಡೆಯಬಾರದು ಎಂದು ಎಚ್ಚರಿಸಿದರು.

ತೋಟಗಾರಿಕೆ ಬೆಳೆಗಳ ಕ್ಷೇತ್ರ ವಿಸ್ತರಣೆಗೆ ಗದಗ ಜಿಲ್ಲೆಯಲ್ಲಿ ಹೆಚ್ಚಿನ ಅವಕಾಶಗಳಿದ್ದು, ರೈತರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸೌಲಭ್ಯ ಒದಗಿಸಿ ಕ್ಷೇತ್ರ ವಿಸ್ತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.

ಜಿಲ್ಲೆಯಲ್ಲಿ ತೀವ್ರ ಬಿಸಿಲಿನ ಪರಿಸ್ಥಿತಿ ಇರುವುದರಿಂದ ಜನಸಾಮಾನ್ಯರು, ವೃದ್ಧರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗೆ ವಿಶೇಷ ಗಮನ ಹರಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ನಿರಂತರ ಲಭ್ಯವಿದ್ದು, ತುರ್ತು ಚಿಕಿತ್ಸಾ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದರು.

ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ವೈದ್ಯಕೀಯ ಸೌಲಭ್ಯಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜೀವ ರಕ್ಷಣೆಗೆ ಆದ್ಯತೆ ನೀಡಿ ಆರೋಗ್ಯ ಸೇವೆ ಸುಧಾರಣೆಗೆ ಶ್ರಮಿಸಬೇಕು ಎಂದು ಸೂಚಿಸಿದರು.

ವಸತಿ ಶಾಲೆಗಳು ಕೇವಲ ತಿಂಡಿ-ಊಟ ನೀಡುವ ಕೇಂದ್ರಗಳಾಗಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಇಂಡೆಂಟ್ ಬುಕ್ ಸರಿಯಾಗಿ ನಿರ್ವಹಿಸಿ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಡಾ. ಎಂ ವಿ ವೆಂಕಟೇಶ್ ಹೇಳಿದರು.

ಅಧಿಕಾರಿಗಳು ನಿರಂತರವಾಗಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಬೇಕು. ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತು ಕ್ರಮ ಅನಿವಾರ್ಯವಾಗುತ್ತದೆ ಎಂದು ಇದೇ ವೇಳೆ ಎಚ್ಚರಿಸಿದರು.

ಗದಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ 219 ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ವಿಶೇಷ ಅಭಿಯಾನ ರೂಪಿಸಬೇಕು ಎಂದು ಸೂಚಿಸಿದರು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂದರು.

ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಜಿಲ್ಲೆ 16ನೇ ಸ್ಥಾನದಲ್ಲಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಶಿಕ್ಷಕರ ಕೊರತೆ ಇರುವ ಕಡೆ ಅತಿಥಿ ಶಿಕ್ಷಕರ ಸೇವೆ ಪಡೆಯುವಂತೆ ಸೂಚಿಸಿದರು. ಪಿಯುಸಿ ಫಲಿತಾಂಶ ಅತ್ಯಂತ ಕಳಪೆ ಮಟ್ಟದಲ್ಲಿದ್ದು, ಅಧಿಕಾರಿಗಳ ಪ್ರಯತ್ನ ಸಮರ್ಪಕವಾಗಿ ಕಾಣುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉತ್ತಮವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂದು ಹೇಳಿದರು.

ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬ ಸರಿಪಡಿಸಬೇಕು. ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಗ್ಯಾಸ್ ಸಿಲಿಂಡರ್ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಉದ್ಯೋಗ ಮೇಳಗಳನ್ನು ಆಯೋಜಿಸಿ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಪಂಚಾಯತಿಗಳಲ್ಲಿ ಸಕಾಲ ಯೋಜನೆಯಡಿ ಬಾಕಿ ಇರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಡಾ. ಎಂ ವಿ ವೆಂಕಟೇಶ ತಿಳಿಸಿದರು.