
ಭಾಲ್ಕಿ:ಮೇ.19: ಬೇಸಿಗೆಯ ತೀವ್ರತೆ ಹಿನ್ನೆಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಪ್ರಥಮ ಆದ್ಯತೆ ನೀಡಿ ತುರ್ತು ಪರಿಹಾರ ಕೈಗೊಳ್ಳಬೇಕು.
ಸಮಸ್ಯೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್, ಖಾಸಗಿ ಬಾವಿ ಹಾಗೂ ಬೋರ್‍ವೆಲ್‍ಗಳ ಮೂಲಕ ನೀರು ಪೂರೈಸಬೇಕು. ಜನರಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗುವಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಖಡಕ್ಕಾಗಿ ತಿಳಿಸಿದರು.
ಉದ್ಯೋಗ ಖಾತ್ರಿ ಯೋಜನೆಯ ಅನುಮೋದಿತ ಕ್ರೀಯಾ ಯೋಜನೆಯಡಿ ನರೇಗಾ ಕೂಲಿ ಕಾರ್ಮಿಕರಿಗೆ ಹಳೆಯ ಆನ್ ಗೋಯಿಂಗ್ ಸಮುದಾಯ ಕಾಮಗಾರಿಗಳಲ್ಲಿ ಕೆಲಸ ಕೊಡಿ.
ಕಾಮಗಾರಿ ಸ್ಥಳದಲ್ಲಿ ಅವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹ ಕಾರ್ಯ ತೀವ್ರಗೊಳಿಸಿ ಎಂದರು.
ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ (ಆಡಳಿತ) ಶಿವಲೀಲಾ, ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಮಾಣಿಕರಾವ್, ನರೇಗಾ ಸಹಾಯಕ ನಿರ್ದೇಶಕ ಬಾಲಾಜಿ ಕೋಟೆ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒ, ಕಾರ್ಯದರ್ಶಿ ಹಾಗೂ ಕರವಸೂಲಿಗಾರರು ಸಭೆಯಲ್ಲಿ ಹಾಜರಿದ್ದರು.






















