
ಯಾದಗಿರಿ:ಮೇ.೨೦: ಉರಿಯುತ್ತಿರುವ ಬೇಸಿಗೆಯ ತೀವ್ರತೆಯ ನಡುವೆಯೇ ಯಾದಗಿರಿ ಮತಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಘೋಷಿತ ವಿದ್ಯುತ್ ವ್ಯತ್ಯಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ತೀವ್ರ ಕಳವಳ ವ್ಯಕ್ತಪಡಿಸಿದರು.
ಈ ಕುರಿತು ಮಾತನಾಡಿದ ಅವರು, “ಜಿಲ್ಲೆಯಲ್ಲಿ ವಿಪರೀತ ಉಷ್ಣಾಂಶದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಬಿಸಿಲಿನ ತಾಪಕ್ಕೆ ಕಂಗೆಟ್ಟು ಹೋಗಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿಯೇ ಯಾವುದೇ ಪೂರ್ವ ಸೂಚನೆ ಇಲ್ಲದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪದೇ ಪದೇ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ” ಎಂದು ದೂರಿದರು.
“ಜನಸಾಮಾನ್ಯರು ತಿಂಗಳ ಕೊನೆಯಲ್ಲಿ ತಪ್ಪದೇ ವಿದ್ಯುತ್ ಬಿಲ್ ಪಾವತಿಸುತ್ತಿದ್ದಾರೆ. ಆದರೆ ಅವರಿಗೆ ಅಗತ್ಯ ಸಮಯದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ದೊರೆಯದಿರುವುದು ವಿದ್ಯುತ್ ಇಲಾಖೆಯ ನಿರ್ಲಕ್ಷ್ಯ ಧೋರಣೆಗೆ ಸ್ಪಷ್ಟ ಉದಾಹರಣೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿರಂತರ ವಿದ್ಯುತ್ ವ್ಯತ್ಯಯದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ಹಿನ್ನಡೆಯಾಗುತ್ತಿದ್ದು, ರಾತ್ರಿ ವೇಳೆಯಲ್ಲಿಯೂ ವಿದ್ಯುತ್ ಕಡಿತದಿಂದ ಜನರು ನಿದ್ರೆಯಿಲ್ಲದೆ ಪರದಾಡುವಂತಾಗಿದೆ. ವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಸಣ್ಣ ಹಾಗೂ ಮಧ್ಯಮ ವರ್ಗದ ವ್ಯಾಪಾರಸ್ಥರು ವಿದ್ಯುತ್ ಕೊರತೆಯಿಂದಾಗಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಹಿಟ್ಟಿನ ಗಿರಣಿಗಳು, ವೆಲ್ಡಿಂಗ್ ಕಾರ್ಯಾಗಾರಗಳು, ಟೈಲರಿಂಗ್ ಅಂಗಡಿಗಳು, ಜೆರಾಕ್ಸ್ ಕೇಂದ್ರಗಳು ಸೇರಿದಂತೆ ಅನೇಕ ಸ್ವ ಉದ್ಯೋಗ ಆಧಾರಿತ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಗೂಲಿ ಆಧಾರಿತ ಕುಟುಂಬಗಳು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ತ್ರಿಫೇಸ್ ವಿದ್ಯುತ್ ಪೂರೈಕೆ ಇಲ್ಲದ ಕಾರಣ ರೈತರು ತಮ್ಮ ತೋಟ ಹಾಗೂ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಕೈಗೆ ಬಂದ ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ಅನ್ನದಾತರು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಆರೋಪಿಸಿದರು.
ವಿದ್ಯುತ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಘೋಷಿತ ವಿದ್ಯುತ್ ಕಡಿತವನ್ನು ತಕ್ಷಣ ನಿಯಂತ್ರಿಸಬೇಕು. ಸಾರ್ವಜನಿಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಇಲ್ಲವಾದರೆ ಸಾರ್ವಜನಿಕರು, ರೈತರು ಹಾಗೂ ವಿವಿಧ ಸಂಘಟನೆಗಳೊAದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಶ್ರೀಧರ ಸಾಹುಕಾರ ಎಚ್ಚರಿಕೆ ನೀಡಿದರು.





















