Home ಜಿಲ್ಲೆ ಕಲಬುರಗಿ ಮಳೆಗಾಲಕ್ಕೆ ಜೆಸ್ಕಾಂ ಜೀರೋ ಟಾಲರೆನ್ಸ್ ನೀತಿ: ಪ್ರವೀಣ್ ಪಾಟೀಲ್ ಹರವಾಳ

ಮಳೆಗಾಲಕ್ಕೆ ಜೆಸ್ಕಾಂ ಜೀರೋ ಟಾಲರೆನ್ಸ್ ನೀತಿ: ಪ್ರವೀಣ್ ಪಾಟೀಲ್ ಹರವಾಳ

ಕಲಬುರಗಿ, ಜೂ.2: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸಂಬಂಧಿತ ಅವಘಡಗಳ ಸಂಭವ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜೆಸ್ಕಾಂ ವ್ಯಾಪ್ತಿಯ ಎಲ್ಲಾ ಇಂಜಿನಿಯರ್‍ಗಳು ಹಾಗೂ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜೆಸ್ಕಾಂ ಅಧ್ಯಕ್ಷರಾದ ಪ್ರವೀಣ್ ಪಾಟೀಲ್ ಹರವಾಳ ಸೂಚಿಸಿದ್ದಾರೆ.
ಮಳೆ ಮತ್ತು ಗಾಳಿಯಿಂದ ವಿದ್ಯುತ್ ತಂತಿಗಳು ಹರಿದು ಬೀಳುವುದು, ವಿದ್ಯುತ್ ಕಂಬಗಳು ಹಾನಿಗೊಳಗಾಗುವುದು ಹಾಗೂ ವಿದ್ಯುತ್ ವ್ಯತ್ಯಯ ಉಂಟಾಗುವ ಸಂಭವ ಹೆಚ್ಚಿದ್ದು, ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿದ್ಯುತ್ ಲೈನ್‍ಗಳ ನಿರಂತರ ಪರಿಶೀಲನೆ, ದುರ್ಬಲ ತಂತಿಗಳು ಹಾಗೂ ಕಂಬಗಳ ತಕ್ಷಣದ ದುರಸ್ತಿ ಮತ್ತು ತುರ್ತು ಪರಿಸ್ಥಿತಿಗಳಿಗೆ ಅಗತ್ಯ ಸಿದ್ಧತೆಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ವಿದ್ಯುತ್ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಹಾಗೂ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ವಿದ್ಯುತ್ ಕಂಬಗಳು, ಟ್ರಾನ್ಸ್‍ಫಾರ್ಮರ್‍ಗಳು ಮತ್ತು ವಿದ್ಯುತ್ ತಂತಿಗಳ ಸಮರ್ಪಕ ಸ್ಟಾಕ್ ಅನ್ನು ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ನಿರಂತರ ವಿದ್ಯುತ್ ಸರಬರಾಜನ್ನು ಖಚಿತಪಡಿಸಿಕೊಳ್ಳುವುದು ಇಲಾಖೆಯ ಪ್ರಮುಖ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದ ಅವಧಿಯಲ್ಲಿ ಯಾವುದೇ ವಿಧದ ವಿದ್ಯುತ್ ಅವಘಡಗಳನ್ನು ತಪ್ಪಿಸಲು ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಸಾರ್ವಜನಿಕರು ಹರಿದು ಬಿದ್ದಿರುವ ವಿದ್ಯುತ್ ತಂತಿಗಳಿಂದ ಸುರಕ್ಷಿತ ಅಂತರ ಕಾಯ್ದುಕೊಂಡು ಅವುಗಳನ್ನು ಯಾವುದೇ ಕಾರಣಕ್ಕೂ ಸ್ಪರ್ಶಿಸಬಾರದು. ವಿದ್ಯುತ್ ಸಂಬಂಧಿತ ಅವಘಡಗಳು ಅಥವಾ ಅಪಾಯಕರ ಪರಿಸ್ಥಿತಿಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಜೆಸ್ಕಾಂ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 1912 ಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದ್ದಾರೆ.