
ನವದೆಹಲಿ: ಜೂ.೧೭:ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ರಸ್ತೆ ಮೂಲಸೌಕರ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಓಊಂI) ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಯಾದವ್ ಹಾಗೂ ಯೋಜನೆಗಳ ಸದಸ್ಯ ಅನಿಲ್ ಚೌಧರಿ ಅವರನ್ನು ಭೇಟಿ ಮಾಡಿದ ಸಂಸದರು, ಕಲ್ಯಾಣ ಕರ್ನಾಟಕದ ಪ್ರಮುಖ ಸಂಪರ್ಕ ಮಾರ್ಗಗಳ ಅಭಿವೃದ್ಧಿ, ರಸ್ತೆ ಅಗಲೀಕರಣ, ಕಾಮಗಾರಿಗಳ ವೇಗವರ್ಧನೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ವ್ಯವಸ್ಥೆ ಕಲ್ಪಿಸುವ ಕುರಿತು ಹಲವು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದರು.
ಸಭೆಯಲ್ಲಿ ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಾದ ಓಊ-೧೫೦ಅ ಹೆದ್ದಾರಿಯ ಎರಡು ಪ್ಯಾಕೇಜ್ಗಳು, ಓಊ-೭೪೮ರ ಮೂರು ಪ್ಯಾಕೇಜ್ಗಳು, ಹೊಸದಾಗಿ ಪ್ರಸ್ತಾಪಿಸಲಾದ ಓಊ-೧೬೭ ಮಾರ್ಗ ಹಾಗೂ ಓಊ-೧೫೦ಂ ರಸ್ತೆ ಅಗಲೀಕರಣ ಯೋಜನೆಗಳ ಪ್ರಗತಿ ಸ್ಥಿತಿಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿಗಳ ಅನುಷ್ಠಾನದಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳು, ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿ, ಅಗತ್ಯ ಅನುಮೋದನೆಗಳ ವೇಗ, ಕಾಮಗಾರಿಗಳ ಗುಣಮಟ್ಟ ಹಾಗೂ ನಿಗದಿತ ಅವಧಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಲಾಯಿತು.
ಅಲ್ಲದೆ, ವಾಹನ ಸಂಚಾರದ ಹೆಚ್ಚಳಕ್ಕೆ ಅನುಗುಣವಾಗಿ ಅಗತ್ಯವಿರುವ ಕಡೆಗಳಲ್ಲಿ ಬೈಪಾಸ್ ರಸ್ತೆ ನಿರ್ಮಾಣ, ಸರ್ವಿಸ್ ರಸ್ತೆ ಅಭಿವೃದ್ಧಿ, ಅಪಘಾತ ಪ್ರಮಾಣ ಕಡಿಮೆ ಮಾಡಲು ವೈಜ್ಞಾನಿಕ ಸುರಕ್ಷತಾ ಕ್ರಮಗಳ ಅಳವಡಿಕೆ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಆಧುನಿಕ ರಸ್ತೆ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯದ ಬಗ್ಗೆ ಸಂಸದರು ಒತ್ತಿ ಹೇಳಿದರು.
“ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕವೇ ಪ್ರಮುಖ ಆಧಾರ. ಗುಣಮಟ್ಟದ ಹೆದ್ದಾರಿ ಜಾಲ ನಿರ್ಮಾಣವಾದರೆ ಈ ಭಾಗದ ಕೃಷಿ, ಕೈಗಾರಿಕೆ, ವ್ಯಾಪಾರ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಹೊಸ ಅಭಿವೃದ್ಧಿಯ ಅವಕಾಶಗಳು ಸೃಷ್ಟಿಯಾಗಲಿವೆ” ಎಂದು ಸಂಸದ ಜಿ. ಕುಮಾರ ನಾಯಕ ಹೇಳಿದರು.
ರಸ್ತೆ ಸಂಪರ್ಕ ವ್ಯವಸ್ಥೆಯ ಸುಧಾರಣೆಯಿಂದ ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು ಅನುಕೂಲವಾಗುವುದರ ಜೊತೆಗೆ ಕೈಗಾರಿಕೆಗಳ ಸ್ಥಾಪನೆ, ಹೂಡಿಕೆ ಆಕರ್ಷಣೆ ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಗೂ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕವು ಹಲವು ವರ್ಷಗಳಿಂದ ಉತ್ತಮ ಮೂಲಸೌಕರ್ಯಕ್ಕಾಗಿ ನಿರೀಕ್ಷಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪೂರ್ಣಗೊಳಿಸುವಿಕೆಯಿಂದ ಈ ಭಾಗದ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯಲಿದೆ. ರಾಯಚೂರು-ಯಾದಗಿರಿ ಮಾತ್ರವಲ್ಲದೆ ಇಡೀ ಕಲ್ಯಾಣ ಕರ್ನಾಟಕದ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಗಮವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಓಊಂI ಅಧ್ಯಕ್ಷ ಸಂತೋಷ್ ಯಾದವ್ ಅವರು ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು. ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ರಸ್ತೆ ಸೌಲಭ್ಯ ಒದಗಿಸುವುದು ಪ್ರಾಧಿಕಾರದ ಪ್ರಮುಖ ಆದ್ಯತೆಯಾಗಿದ್ದು, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹೆದ್ದಾರಿ ಯೋಜನೆಗಳ ಪ್ರಗತಿಯಲ್ಲಿ ಗುಣಮಟ್ಟ, ಪಾರದರ್ಶಕತೆ ಹಾಗೂ ಸಮಯಪಾಲನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.
ಈ ಯೋಜನೆಗಳು ಪೂರ್ಣಗೊಂಡ ಬಳಿಕ ರಾಯಚೂರು-ಯಾದಗಿರಿ ಕ್ಷೇತ್ರದ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದ್ದು, ರಸ್ತೆ ಸುರಕ್ಷತೆ ಹೆಚ್ಚುವುದರ ಜೊತೆಗೆ ವ್ಯಾಪಾರ, ಕೈಗಾರಿಕೆ ಹಾಗೂ ಆರ್ಥಿಕ ಬೆಳವಣಿಗೆಗೆ ಹೊಸ ದಿಕ್ಕು ಸಿಗಲಿದೆ ಎಂದು ಸಂಸದ ಜಿ. ಕುಮಾರ ನಾಯಕ ಅಭಿಪ್ರಾಯಪಟ್ಟರು.




























