
ನವದೆಹಲಿ, ಜೂ.29: ಸಿಕ್ಕಿಂ, ಉತ್ತರ ಬಂಗಾಳ ಮತ್ತು ಅರುಣಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅರುಣಾಚಲ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಿಂದಾಗಿ ಮೂವರು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಐದಾರು ದಿನಗಳಲ್ಲಿ ನೈರುತ್ಯ ಮುಂಗಾರು ಚುರುಕು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಈ ಬಾರಿ ಮುಂಗಾರು ವಿಳಂಬವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಳೆದ ಎರಡು ವರ್ಷಗಳಲ್ಲೇ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿದೆ.
ಮುಂದಿನ ಎರಡು ಮೂರು ದಿನಗಳಲ್ಲಿ ನೈರುತ್ಯ ಮುಂಗಾರು ಉತ್ತರ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಇತರೆ ರಾಜ್ಯಗಳ ಕೆಲವು ಪ್ರದೇಶಗಳಿಗೆ ಮತ್ತಷ್ಟು ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಳಿಕ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಆಗ್ನಿಯ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಉತ್ತಮ ಮಳೆ ಮುನ್ನೋಟವನ್ನು ಇಲಾಖೆ ನೀಡಿದೆ.
ಆದಾಗ್ಯೂ, ಉತ್ತರ ಪ್ರದೇಶದ ಕೆಲವೆಡೆ 29ರಂದು ತಾಪಮಾನ ಗಣನೀಯವಾಗಿ ಹೆಚ್ಚಲಿದ್ದು, ಬಿಸಿಗಾಳಿ ತೀವ್ರತೆ ಹೆಚ್ಚುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನೂ ನೀಡಿದೆ.
ಪರಿಸ್ಥಿತಿ ಹೀಗೆಯೇ ಪೂರಕವಾಗಿದ್ದರೆ ಜುಲೈ 4ರಂದು ದೆಹಲಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ.
























