
ಬೆಂಗಳೂರು.ಜು.೬: ಸೂಪರ್ ಎಲ್‌ನಿನೋ ಪರಿಣಾಮದಿಂದಾಗಿ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿನ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಬೇಕು ಮತ್ತು ಯಾವುದೇ ಕಾರಣಕ್ಕೂ ಬೆಳೆಗಳಿಗೆ ನೀರು ಹರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದ ಬರ ಪರಿಸ್ಥಿತಿ ಮತ್ತು ಸರ್ಕಾರದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರ ನಿರ್ವಹಣೆಗೆ ಸರ್ಕಾರ ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ಹಂಚಿಕೊಂಡರು.
ಚಿತ್ರದುರ್ಗ, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭೀಕರ ಪರಿಸ್ಥಿತಿ ಇದ್ದು, ಜಲಾಶಯಗಳು ಈಗಾಗಲೇ ’ಡೆಡ್ ಸ್ಟೋರೇಜ್’ (ಮೃತ ಸಂಗ್ರಹ) ಮಟ್ಟಕ್ಕೆ ತಲುಪಿವೆ. ಈ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಎಲ್ಲೆಲ್ಲಿ ನೀರಿನ ಸಮಸ್ಯೆ ಎದುರಾಗಿದೆಯೋ, ಅಲ್ಲೆಲ್ಲಾ ತಕ್ಷಣವೇ ಸ್ಪಂದಿಸಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಡಿಸಿಎಂ ವಿವರಿಸಿದರು.
“ನಾನು ವೈಯಕ್ತಿಕವಾಗಿ ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಸದ್ಯದ ಸಮಾಧಾನಕರ ಸಂಗತಿಯೆಂದರೆ, ಕಳೆದ ದಿನಗಳಲ್ಲಿ ಚಿಕ್ಕಮಗಳೂರು ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಿದೆ. ಇದರಿಂದಾಗಿ ಕೃಷ್ಣರಾಜಸಾಗರ (ಏಖS) ಮತ್ತು ಹೇಮಾವತಿ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಇದು ಕುಡಿಯುವ ನೀರಿನ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ನಿವಾರಿಸಲಿದೆ,” ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.
ನಾಳೆ ಗುಲ್ಬರ್ಗ ವಿಭಾಗಕ್ಕೆ ಭೇಟಿ, ಗೋಶಾಲೆಗಳ ಸ್ಥಾಪನೆಗೆ ಕ್ರಮ
ಬರ ಪರಿಸ್ಥಿತಿಯ ಪರಾಮರ್ಶೆಗಾಗಿ ನಾಳೆ (ಮಂಗಳವಾರ) ಗುಲ್ಬರ್ಗ (ಕಲಬುರಗಿ) ವಿಭಾಗಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಜಾನುವಾರುಗಳ ರಕ್ಷಣೆಗಾಗಿ ತಕ್ಷಣವೇ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸೂಚನೆ ನೀಡಲಾಗಿದೆ.ಯಾವುದೇ ಗ್ರಾಮ ಅಥವಾ ನಗರ ಪ್ರದೇಶದಲ್ಲಿ ಕುಡಿಯುವ ನೀರಿಗೆ ತತ್ವಾರ ಬರದಂತೆ ನೋಡಿಕೊಳ್ಳಲು ತುರ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.
ಬರ ನಿರ್ವಹಣೆಗೆ ಸರ್ಕಾರದಿಂದ ಏನಾದರೂ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಸದ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಆದರೆ, ಮುಂಬರುವ ದಿನಗಳಲ್ಲಿ ಪರಿಸ್ಥಿತಿಯ ತೀವ್ರತೆಯನ್ನು ಸೂಕ್ಷ್ಮವಾಗಿ ಗಮನಿಸಿ, ಅದಕ್ಕೆ ತಕ್ಕಂತೆ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ,” ಎಂದು ಸ್ಪಷ್ಟಪಡಿಸಿದರು.
































