Home ಮುಖಪುಟ ಸುದ್ದಿ ರಾಜ್ಯದ ಹಲವೆಡೆ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರ,ಜು.೭:ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.


ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರಿ ಮಳೆಯ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ರಜೆ ಘೋಷಿಸಿದ್ದಾರೆ. ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ (೧೨ನೇ ತರಗತಿವರೆಗೆ)ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.


ಉಳಿದಂತೆ ಕೊಡಗು ಜಿಲ್ಲೆಯಲ್ಲಿಯೂ ವ್ಯಾಪಕ ಮಳೆಯಾಗುತ್ತಿದ್ದು, ಗುಡ್ಡಕುಸಿತ ಭೀತಿ ಇದೆ.ಆಯಾ ತಾಲೂಕು ಅಥವಾ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಸ್ಥಳೀಯ ಹವಾಮಾನ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.ಅಲ್ಲದೆ, ಮಳೆಯ ತೀವ್ರತೆ ಹೆಚ್ಚಾಗಿರುವ ಕಾರಣ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ಇಂದು ರಜೆ ಮುಂದುವರಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.


ಇದೇ ವೇಳೆ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು,ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ವ್ಯಾಪ್ತಿಯ ಎಲ್ಲಾ ಶಾಲೆ, ಅಂಗನವಾಡಿ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
.

ತುಂಗಾ ಡ್ಯಾಂ ಒಳಹರಿವಿನಲ್ಲಿ ಏರಿಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಕ್ರಮೇಣ ಚುರುಕುಗೊಂಡಿದ್ದು,ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಪ್ರಮುಖ ಡ್ಯಾಂಗಳ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ.


ಕಳೆದ ೨೪ ಗಂಟೆಗಳ ಅವಧಿಯಲ್ಲಿ ಘಟ್ಟ ವ್ಯಾಪ್ತಿಯ ಪ್ರದೇಶಗಳಾದ ಮಾಣಿಯಲ್ಲಿ ೧೮೦ ಮಿಲಿ ಮೀಟರ್ (ಮಿ.ಮೀ.)ಮಳೆಯಾಗಿದ್ದು, ಹಾಗೆಯೇ ಯಡೂರು ೧೮೦ ಮಿ.ಮೀ., ಹುಲಿಕಲ್ ೧೪೫ ಮಿ.ಮೀ. ಮಾಸ್ತಿಕಟ್ಟೆ ೧೫೨ ಮಿ.ಮೀ., ಚಕ್ರಾ ೧೨೩ ಮಿ.ಮೀ. ಸಾವೇಹಕ್ಲು ೧೪೨ ಮಿ.ಮೀ. ಮಳೆಯಾಗಿದೆ. ಉಳಿದಂತೆ ಶಿವಮೊಗ್ಗದಲ್ಲಿ ೧೬.೬೦ ಮಿ.ಮೀ., ಭದ್ರಾವತಿ ೧೧.೫೦ ಮಿ.ಮೀ., ತೀರ್ಥಹಳ್ಳಿ ೬೫.೧೦ ಮಿ.ಮೀ., ಸಾಗರ ೩೧.೧೦ ಮಿ.ಮೀ., ಶಿಕಾರಿಪುರ ೧೦.೬೦ ಮಿ.ಮೀ., ಸೊರಬ ೧೪.೪೦ ಮಿ.ಮೀ. ಹೊಸನಗರದಲ್ಲಿ ೭೦.೩೦ ಮಿ.ಮೀ. ಮಳೆಯಾಗಿದೆ.


ಭದ್ರಾ ಜಲಾಶಯದ ನೀರಿನ ಮಟ್ಟ ೧೩೯ ಅಡಿ ೬ ಇಂಚು (ಗರಿಷ್ಠ ಮಟ್ಟ :೧೮೬) ಇದ್ದು,ಪ್ರಸ್ತುತ ೪೧೩೫ ಕ್ಯೂಸೆಕ್ ಒಳಹರಿವಿದ್ದು, ೨೧೨ ಕ್ಯೂಸೆಕ್ ಹೊರ ಹರಿವಿದೆ.ಅಲ್ಲದೆ, ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ೧೭೫೧.೬೦ (ಗರಿಷ್ಠ ಮಟ್ಟ : ೧೮೧೯) ಅಡಿಯಿದೆ.


ಇದೇ ವೇಳೆ ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು,ತುಂಗಾ ಜಲಾಶಯದ ಒಳಹರಿವು ೨೬,೪೩೭ ಕ್ಯೂಸೆಕ್ ಗೆ ಏರಿಕೆಯಾಗಿದೆ. ಈಗಾಗಲೇ ಜಲಾಶಯ ಗರಿಷ್ಠ ಮಟ್ಟ ತಲುಪಿರುವುದರಿಂದ, ೨೨ ಕ್ರಸ್ಟ್ ಗೇಟ್ ಗಳ ಮೂಲಕ ಒಳಹರಿವಿನಷ್ಟೆ ನೀರನ್ನು ಹೊರ ಬಿಡಲಾಗುತ್ತಿದೆ.ಡ್ಯಾಂನ ಹೊರಹರಿವಿನಲ್ಲಿ ನಿರಂತರ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯ ನೀರಿನ ಹರಿವಿನಲ್ಲಿ ಮತ್ತಷ್ಟು ಹೆಚ್ಚಳ ಕಂಡುಬಂದಿದೆ.


ಶಿವಮೊಗ್ಗ ನಗರದಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು,ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ