
ಬೆಂಗಳೂರು,ಜು.೮ : ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಸದ್ಯ ಕೊಡಗು ,ದಕ್ಷಿಣ ಕನ್ನಡ ,ಶಿವಮೊಗ್ಗ, ಚಿಕ್ಕಮಗಳೂರು,ಬೆಳಗಾವಿ,ಕೊಡಗು, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ವಿವಿಧೆಡೆ ಭಾರೀ ಮಳೆಯ ಮುನ್ಸೂಚನೆ ಇರಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಹಲವು ಜಿಲ್ಲೆಗಳಲ್ಲಿ ನದಿ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಸುರಕ್ಷಿತವಾಗಿರಲು ಆಯಾಯಾ ಜಿಲ್ಲಾಡಳಿತಗಳು ಸೂಚಿಸಿವೆ. ಎಲ್ಲಾ ಪ್ರಸಿದ್ಧ ಜಲಪಾತಗಳು,ನದಿಗಳು ಮತ್ತು ಹಳ್ಳ-ಕೊಳ್ಳಗಳು, ಗುಡ್ಡಗಾಡು ಪ್ರದೇಶಗಳು ಹಾಗೂ ಇಳಿಜಾರು ಜಾಗಗಳು, ಪ್ರವಾಸಿ ಹಾಗೂ ಅಪಾಯಕಾರಿ ಸ್ಥಳಗಳು ಸ್ಥಳಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ.
ಇನ್ನುಳಿದಂತೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು,ಬೇತ್ರಿ ಬಳಿ ಕಾವೇರಿ ನದಿ ಸೇರಿದಂತೆ ಕದನೂರು, ಬೋಯಿಕೇರಿ, ಬೇಟೋಳಿ ಹಳ್ಳ-ಕೊಳ್ಳಗಳಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿದ್ದು, ಭತ್ತದ ಗದ್ದೆಗಳು ಜಲಾವೃತಗೊಂಡಿವೆ.ಅಲ್ಲದೆ, ಕಾಫಿ ತೋಟಗಳು ಹಾಗೂ ಇತರೆಡೆಗಳಲ್ಲಿ ಮರ ಮತ್ತು ಮರದ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದಾಗಿ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಿಬ್ಬಂದಿ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ಇದೇ ವೇಳೆ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ-ವೆಂಗುರ್ಲಾ ರಾಜ್ಯ ಹೆದ್ದಾರಿ ಮೇಲೆಯೇ ಬಂಡೆಗಲ್ಲುಗಳು ಉರುಳಿ ಬಿದ್ದಿವೆ. ಮಹಾರಾಷ್ಟ್ರ ಸಾರಿಗೆ ಬಸ್, ಕಾರು ದಾಟಿ ಹೋಗುವ ವೇಳೆಯಲ್ಲಿಯೇ ರಸ್ತೆಗೆ ಬೃಹತ್ ಬಂಡೆಗಲ್ಲುಗಳು ಬಿದ್ದಿದ್ದು, ಕ್ಷಣಾರ್ಧದಲ್ಲಿ ಬಸ್ ಮತ್ತು ಕಾರು ಬಚಾವ್ ಆಗಿವೆ. ಇದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಬಂಡೆಗಲ್ಲುಗಳು ಉರುಳಿ ಬಿದ್ದ ಬಳಿಕ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಜೆಸಿಬಿಗಳ ಮೂಲಕ ಬಂಡೆಗಲ್ಲು ತೆರವು ಕಾರ್ಯಾಚರಣೆ ನಡೆಸಲಾಯಿತು.
ಈ ನಡುವೆ ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು,ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಕ್ಕೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಶಿರಾಡಿಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ಗುಡ್ಡ ಕುಸಿತ ಉಂಟಾಗಿದೆ.
ಸಕಲೇಶಪುರದಿಂದ ಮಂಗಳೂರು ಕಡೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದ್ದು, ತಕ್ಷಣ ಜೆಸಿಬಿ ಬಳಸಿ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.ಈ ಬಾರಿ ಗುಡ್ಡ ಕುಸಿದರೂ ಸಂಚಾರಕ್ಕೆ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತದ ಸಾಧ್ಯತೆ ಇರುವ ಸ್ಥಳಗಳನ್ನು ಜಿಲ್ಲಾಡಳಿತ ಗುರುತಿಸಿದೆ.
ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ
ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಇಂದು ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆಯಾಯ ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸದ್ಯ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಜೆ ನೀಡಲಾದ ದಿನಗಳನ್ನು ಮುಂದಿನ ವಾರಾಂತ್ಯದ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಸರಿದೂಗಿಸಲು ನಿರ್ಧರಿಸಲಾಗಿದೆ.
ಇನ್ನು ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಬೆಳಗಾವಿ ಜಿಲ್ಲೆಯ ಬೆಳಗಾವಿ, ನಿಪ್ಪಾಣಿ ಹಾಗೂ ಖಾನಾಪುರ ಸೇರಿದಂತೆ ಒಟ್ಟು ೩ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.






























