Home ಮುಖಪುಟ ಸುದ್ದಿ ಸಾಲಮನ್ನಾ ಘೋಷಣೆಗೆ ಅಶೋಕ್ ಒತ್ತಾಯ

ಸಾಲಮನ್ನಾ ಘೋಷಣೆಗೆ ಅಶೋಕ್ ಒತ್ತಾಯ

ಬೆಂಗಳೂರು, ಜು. ೯- ಬರ ಮತ್ತು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೊಳಗಾಗಿರುವ ರಾಜ್ಯದ ಎಲ್ಲಾ ರೈತರಿಗೆ ಕನಿಷ್ಠ ೫೦,೦೦೦ ವರೆಗಿನ ಸಾಲಮನ್ನಾವನ್ನು ತಕ್ಷಣವೇ ಘೋಷಿಸಬೇಕು. ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ


ರಾಜ್ಯದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಹಾಗೂ ಕೆಲವು ಕಡೆ ಎದುರಾಗಿರುವ ಬರದ ಹಿನ್ನೆಲೆಯಲ್ಲಿ, ನೊಂದ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳಾದ ಶಿವಕುಮಾರ್ ಅವರಿಗೆ ಪತ್ರದ ಮೂಲಕ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿರುವ ಅವರು
ಪ್ರಕೃತಿ ವಿಕೋಪದಂತಹ ಸೂಕ್ಷ್ಮ ವಿಚಾರಗಳಲ್ಲೂ ರಾಜಕೀಯ ನಿರ್ಣಯಗಳನ್ನು ಕೈಗೊಳ್ಳುತ್ತಾ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ಕೈಬಿಡಬೇಕು. ರೈತರಿಗೆ ಈಗ ಬೇಕಾಗಿರುವುದು ಕೇವಲ ಆಶ್ವಾಸನೆಗಳಲ್ಲ, ತಕ್ಷಣದ ಪರಿಹಾರ. ಎಂದಿದ್ದಾರೆ.


ತುರ್ತು ನಿಧಿಯಿಂದ ತಕ್ಷಣವೇ ಸಂತ್ರಸ್ತ ರೈತರಿಗೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ, ಯಾರೂ ವಂಚಿತರಾಗದಂತೆ ನೋಡಿಕೊಳ್ಳಬೇಕು.
ಪ್ರತಿ ತಾಲೂಕಿನಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ, ಬೆಳೆಹಾನಿ ಸಮೀಕ್ಷೆ, ಪರಿಹಾರ ವಿತರಣೆ ಮತ್ತು ಪುನರ್ವಸತಿ ಕಾರ್ಯಗಳ ಉಸ್ತುವಾರಿ ವಹಿಸಬೇಕು. ಎಂದು ಒತ್ತಾಯಿಸಿದ್ದಾರೆ.


ಜಿಲ್ಲಾಧಿಕಾರಿಗಳ ಖಾತೆಗೆ ತುರ್ತು ಅನುದಾನ ಬಿಡುಗಡೆ ಮಾಡಿ, ಪರಿಹಾರ ಕಾರ್ಯಗಳಿಗೆ ಹೆಚ್ಚಿನ ವೇಗ ನೀಡಬೇಕು. ಬೆಳೆಹಾನಿ ಸಮೀಕ್ಷೆಯನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸಿ, ರಾಜ್ಯಕ್ಕೆ ಸಿಗಬೇಕಾದ ಕೇಂದ್ರದ ನೆರವನ್ನು ಶೀಘ್ರವಾಗಿ ಪಡೆದುಕೊಳ್ಳಲು ವರದಿ ಸಲ್ಲಿಸಬೇಕು. ಎಂದು ಹೇಳಿದ್ದಾರೆ
ಜಿಲ್ಲಾ ಉಸ್ತುವಾರಿ ಸಚಿವರುಗಳು ತಕ್ಷಣವೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕ್ರಮಗಳನ್ನು ಜಾರಿಗೊಳಿಸಬೇಕು.


ರಾಜ್ಯ ಸರ್ಕಾರ ರಾಜಕೀಯ ಪ್ರೇರಿತ ಆರೋಪಗಳನ್ನು ಬದಿಗಿಟ್ಟು, ತನ್ನ ಆಡಳಿತಾತ್ಮಕ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಮುಖ್ಯಮಂತ್ರಿಗಳು ತಾವು ನೀಡಿರುವ ರೈತರ ಸಾಲಮನ್ನಾ ಭರವಸೆಯನ್ನು ತಕ್ಷಣವೇ ಈಡೇರಿಸಿ ಸಂತ್ರಸ್ತ ರೈತರ ನೆರವಿಗೆ ಧಾವಿಸಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದ್ದಾರೆ.