
ಸಂಜೆವಾಣಿ ವಾರ್ತೆ
ಹೊಸಪೇಟೆ.ಜು.9 ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹ 14 ಟಿಎಂಸಿ ಗೆ ತಲುಪಿದೆ.
ತುಂಗಭದ್ರಾ ಜಲಾಶಯದ ಹಿನ್ನೀರಿನ ಪ್ರದೇಶ ಹಾಗೂ ಮಲೆನಾಡು, ಶಿವಮೊಗ್ಗ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕಳೆದೆರಡು ದಿನದಲ್ಲಿ ಜಲಾಶಯಕ್ಕೆ 4 ಟಿಎಂಸಿ ನೀರು ಹರಿದು ಬಂದಿದೆ. ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 1,633.00 ಅಡಿ ಇದ್ದು. ಗುರುವಾರ ಜಲಾಶಯದ ನೀರಿನ ಮಟ್ಟ 1,592.95 ಅಡಿಗೆ ತಲುಪಿದೆ. 105.788 ಟಿಎಂಸಿ ನೀರಿನ ಸಂಗ್ರಹ ಸಾಮಾರ್ಥ್ಯವಿರುವ ಜಲಾಶಯದಲ್ಲಿ ಪ್ರಸ್ತುತ 13.688 ಟಿಎಂಸಿ ನೀರಿನ ಸಂಗ್ರಹವಾಗಿದೆ. ಜಲಾಶಯಕ್ಕೆ 28,654 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸದ್ಯ 177 ಕ್ಯೂಸೆಕ್ ನೀರನ್ನು ಮಾತ್ರ ಜಲಾಶಯದಿಂದ ಹೊರ ಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 75.837 ಟಿಎಂಸಿ ನೀರಿನ ಸಂಗ್ರಹವಿತ್ತು. 51,955 ಕ್ಯೂಸೆಕ್ ಒಳ ಹರಿವು ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ, ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದರೂ, ದಿನದಿಂದ ದಿನಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ಮಲೆನಾಡು ಸೇರಿದಂತೆ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಲಾಶಯದ ಒಳ ಹರಿವಿನ ಪ್ರಮಾಣ ಇನ್ನು ಜಾಸ್ತಿ ಆಗಲಿದೆ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

































