
ಸಂಜೆವಾಣಿ ವಾರ್ತೆ,
ಮುದ್ದೇಬಿಹಾಳ, ಜು. ೧೦: ತಾಲ್ಲೂಕಿನ ಬಸರಕೋಡದ ಪ್ರಸಿದ್ಧ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಬೆಳ್ಳಿ ಕವಚ ಕಳ್ಳತನ ಪ್ರಕರಣವು ಲಕ್ಷಾಂತರ ಭಕ್ತರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದು, ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸಿ ಕಳುವಾದ ಬೆಳ್ಳಿ ಕವಚವನ್ನು ವಶಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು.
ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನ ಸಮಿತಿಯಿಂದ ಪ್ರಕರಣದ ಮಾಹಿತಿ ಪಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರದಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇಂತಹ ಪವಿತ್ರ ಕ್ಷೇತ್ರದಲ್ಲಿ ನಡೆದ ಕಳ್ಳತನ ಅತ್ಯಂತ ಖಂಡನೀಯವಾಗಿದ್ದು, ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ ಎಂದು ಹೇಳಿದರು.
ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತ್ವರಿತಗೊಳಿಸಬೇಕು. ಘಟನೆ ನಡೆದು ನಾಲ್ಕು ದಿನಗಳಾದರೂ ಆರೋಪಿಗಳ ಸುಳಿವು ಸಿಕ್ಕಿಲ್ಲ. ಅಗತ್ಯವಿದ್ದರೆ ವಿಶೇಷ ತನಿಖಾ ತಂಡಗಳನ್ನು ರಚಿಸಿ, ಕಳ್ಳರನ್ನು ಬಂಧಿಸಿ ದೇವರ ಬೆಳ್ಳಿ ಕವಚವನ್ನು ವಶಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಎರಡು ಬಾರಿ ಮಾತನಾಡಿದ್ದೇನೆ. ಇನ್ನೂ ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ದೇವಸ್ಥಾನದ ಭಕ್ತರ ಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ದೇವಸ್ಥಾನದ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದಿದ್ದ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ಅಂಶದ ಬಗ್ಗೆಯೂ ಪೊಲೀಸರು ಸಮಗ್ರ ತನಿಖೆ ನಡೆಸಲಿ. ಆದರೆ ಈ ಕೃತ್ಯದಲ್ಲಿ ಸ್ಥಳೀಯರ ಕೈವಾಡ ಇಲ್ಲ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಕೆ.ವೈ. ಬಿರಾದಾರ, ಸದಸ್ಯ ಎಸ್.ಎಸ್. ಹಂಡರಗಲ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶಗೌಡ ಪಾಟೀಲ, ಎಸ್ಸಿ ಮೋರ್ಚಾ ಮುಖಂಡ ಮಂಜುನಾಥ ಚಲವಾದಿ ಸೇರಿದಂತೆ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

































