
ಜಮಖಂಡಿ | ಜು. 20:ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮೆಟ್ರಿಕ್ ನಂತರದ ಬಾಲಕಿಯರ ಅಂಬೇಡ್ಕರ್ (ಎಸ್ಸಿ/ಎಸ್ಟಿ) ವಸತಿ ನಿಲಯದಲ್ಲಿ ದಲಿತ ವಿದ್ಯಾರ್ಥಿನಿಯರ ಮೇಲೆ ದೈಹಿಕ ಹಾಗೂ ಮಾನಸಿಕ ಕಿರುಕುಳ ಮತ್ತು ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಬಾಗಲಕೋಟೆ ಜಿಲ್ಲಾ ಘಟಕ) ಸರ್ಕಾರವನ್ನು ಒತ್ತಾಯಿಸಿದೆ.
ಸಮಿತಿಯ ಜಿಲ್ಲಾ ಸಂಚಾಲಕ ಮುತ್ತಣ್ಣ ಮೇತ್ರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ, ವಸತಿ ನಿಲಯದ ವಾರ್ಡನ್ ರಾಜೇಶ್ವರಿ ಹಾಗೂ ಅಡುಗೆ ಸಿಬ್ಬಂದಿ ವಿದ್ಯಾರ್ಥಿನಿಯರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದು, ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಜುಲೈ 18ರಂದು ರಾತ್ರಿ ಪರೀಕ್ಷೆಯ ತಯಾರಿಗಾಗಿ ಗ್ರಂಥಾಲಯದಲ್ಲಿ ಓದಲು ಅವಕಾಶ ನೀಡುವಂತೆ ವಿದ್ಯಾರ್ಥಿನಿಯರು ಮನವಿ ಮಾಡಿಕೊಂಡಾಗ, ಅವಕಾಶ ಕಲ್ಪಿಸುವ ಬದಲು ವಾರ್ಡನ್ ಹಾಗೂ ಸಿಬ್ಬಂದಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದ ಕೆಲ ವಿದ್ಯಾರ್ಥಿನಿಯರ ಮೈ ಮೇಲೆ ಗಾಯಗಳಾಗಿದ್ದು, ಅವರು ಮಾನಸಿಕ ಆಘಾತಕ್ಕೂ ಒಳಗಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಶಿಕ್ಷಣಕ್ಕಾಗಿ ಸರ್ಕಾರದ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಓದಲು ಅವಕಾಶ ಕೇಳಿದ ಕಾರಣಕ್ಕೆ ಹಲ್ಲೆ ನಡೆಸಿರುವುದು ಶಿಕ್ಷಣದ ಹಕ್ಕು, ಮಾನವ ಹಕ್ಕು ಹಾಗೂ ಗೌರವಕ್ಕೆ ಧಕ್ಕೆ ತರುವ ಕೃತ್ಯವಾಗಿದೆ. ಅಲ್ಲದೆ, ವಸತಿ ನಿಲಯದ ಅವ್ಯವಸ್ಥೆ ಮತ್ತು ಅನ್ಯಾಯಗಳನ್ನು ಪ್ರಶ್ನಿಸುವ ವಿದ್ಯಾರ್ಥಿನಿಯರನ್ನು ಬೆದರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಸೇರಿದಂತೆ ಅನ್ವಯವಾಗುವ ಕಾನೂನುಗಳಡಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಇಲಾಖೆಯ ಆಯುಕ್ತರಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಈ ಪತ್ರಿಕಾ ಪ್ರಕಟಣೆ ಮೂಲಕ ಆನಂದ ದೊಡ್ಡಮನಿ, ಕೃಷ್ಣಮೂರ್ತಿ ನಾಯ್ಕರ, ಸಂಗಣ್ಣ ಮಡ್ಡಿ, ಮಾರುತಿ ಮರೆಗುದ್ದಿ, ಚಂದ್ರು ಹರಿಜನ, ಲಕ್ಷ್ಮಣ ಹರಿಜನ ಹಾಗೂ ಪ್ರಭು ದೊಡ್ಡಮನಿ ಸೇರಿದಂತೆ ಸಮಿತಿಯ ಮುಖಂಡರು ಆಗ್ರಹಿಸಿದ್ದಾರೆ.






























