Home ಜಿಲ್ಲೆ ಕಲಬುರಗಿ ಜಾನಪದ ಕಲೆ ಉಳಿಸಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ

ಜಾನಪದ ಕಲೆ ಉಳಿಸಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ

ಆಳಂದ: ಗ್ರಾಮೀಣ ಬದುಕಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಯ ಶ್ರೀಮಂತಿಕೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ ತಾಲೂಕಿನ ಶ್ರೀ ಯಲ್ಲಾಲಿಂಗ ಜಾನಪದ ಕಲಾ ಸಂಸ್ಥೆ (ರಿ), ನಸಿರವಾಡಿ ಆಶ್ರಯದಲ್ಲಿ ಆಯೋಜಿಸಿದ್ದ ‘ಜಾನಪದ ಕಲಾಸೌರಭ’ ಸಾಂಸ್ಕೃತಿಕ ಕಾರ್ಯಕ್ರಮ ನಸಿರವಾಡಿ ಗ್ರಾಮದ ಹನುಮಾನ ಮಂದಿರದಲ್ಲಿ ಸಂಭ್ರಮ-ಸಡಗರದಿAದ ನಡೆಯಿತು.
ಕಾರ್ಯಕ್ರಮವನ್ನು ರೈತ ಅಂಬರಾಯ ತುಕಾಗೊಳ ಉದ್ಘಾಟಿಸಿ ಮಾತನಾಡಿ, ಜಾನಪದ ಕಲೆಗಳು ನಮ್ಮ ನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜೀವನ ಮೌಲ್ಯಗಳ ಪ್ರತಿಬಿಂಬವಾಗಿವೆ. ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿರುವ ಜನಪದ ಕಲೆಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು. ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ದೊರೆಯುವುದರ ಜೊತೆಗೆ ಸಾಂಸ್ಕೃತಿಕ ಪರಂಪರೆ ಜೀವಂತವಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಗುಂಡಪ್ಪ ಯಂಕಟ್ಟಿ ವಹಿಸಿ, ಜಾನಪದ ಕಲೆಗಳು ಸಮಾಜದ ಸಂಸ್ಕೃತಿ ಮತ್ತು ಜೀವನಶೈಲಿಯ ಜೀವನಾಡಿಯಾಗಿದ್ದು, ಇವುಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಯುವಜನತೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ನಾಮದೇವ ಹುಲ್ಲೆ, ಬಾಬು ಮೇಕಾಲೆ, ಅಮೃತ ಹೊನ್ನಾಳೆ, ಕನ್ನಯ್ಯ ಯಂಕಟ್ಟಿ ಹಾಗೂ ಸೈಬಣ್ಣ ಖವಡೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಅವರು ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾಜಿಕ ಸಾಮರಸ್ಯವನ್ನು ಬಲಪಡಿಸುವುದರ ಜೊತೆಗೆ ಜಾನಪದ ಕಲಾವಿದರಿಗೆ ಹೊಸ ಉತ್ಸಾಹ ತುಂಬುತ್ತವೆ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ತಾತೇರಾವ್ ಪಾಟೀಲ ಸ್ವಾಗತಿಸಿದರು. ಕಲಾವಿದ ಯಲ್ಲಾಲಿಂಗ ಪಾಟೀಲ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಜಾನಪದ ಗೀತೆಗಳು, ಸಾಂಪ್ರದಾಯಿಕ ಕಲಾ ಪ್ರದರ್ಶನಗಳು ಹಾಗೂ ಸ್ಥಳೀಯ ಕಲಾವಿದರ ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಪ್ರೇಕ್ಷಕರ ಮನಗೆದ್ದವು. ಗ್ರಾಮಸ್ಥರು, ಕಲಾಭಿಮಾನಿಗಳು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ್ದ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.