
ಸಂಜೆವಾಣಿ ವಾರ್ತೆ,
ವಿಜಯಪುರ, ಆ.೬: ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ಶಿಕ್ಷಣ ಮತ್ತು ಸಂಶೋಧನೆಯೊAದಿಗೆ ಸಮನ್ವಯಗೊಳಿಸುವ ಮೂಲಕ ಗುಣಮಟ್ಟದ ಸಂಶೋಧನೆಗೆ ಹೊಸ ದಿಕ್ಕು ನೀಡಬೇಕಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಮೀನಾ ಚಂದಾವರಕರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಹಾಗೂ ವಾಣಿಜ್ಯ ಅಧ್ಯಯನ ವಿಭಾಗದ ಸಹಯೋಗದಲ್ಲಿ ಐಸಿಎಸ್ಎಸ್ಆರ್ ಪ್ರಾಯೋಜಿತ ೧೦ ದಿನಗಳ ಸಂಶೋಧನಾ ವಿಧಾನಶಾಸ್ತ್ರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನವೀನ ಹಾಗೂ ಸಮಾಜಮುಖಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯವಾಗಿದೆ. ಭಾರತೀಯ ಜ್ಞಾನ ವ್ಯವಸ್ಥೆಯ ಮೌಲ್ಯಗಳನ್ನು ಆಧುನಿಕ ಶಿಕ್ಷಣದೊಂದಿಗೆ ಸಂಯೋಜಿಸಿದಾಗ ಸಂಶೋಧನೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಪ್ರಕಾಶ್ ಎಸ್. ಕಾಂಬಳೆ, ವಿಕಸಿತ ಭಾರತ ಪರಿಕಲ್ಪನೆ ಸಾಕಾರಗೊಳಿಸುವಲ್ಲಿ ಎದುರಾಗುವ ಸವಾಲುಗಳನ್ನು ವಿವರಿಸಿದರು. ಸಂಶೋಧಕರು ದತ್ತಾಂಶ ಆಧಾರಿತ ಹಾಗೂ ಅಂತರಶಿಸ್ತೀಯ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಅಧ್ಯಯನ ನಡೆಸಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ಹತ್ತು ದಿನಗಳ ತರಬೇತಿ ಕಾರ್ಯಕ್ರಮವನ್ನು ಸಂಶೋಧನಾ ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಸಂಶೋಧನಾ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಅರ್ಥಪೂರ್ಣ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥೆ ಹಾಗೂ ಡೀನ್ ಪ್ರೊ. ಅನಿತಾ ಆರ್. ನಾಟೇಕರ್, ವಿಶ್ವವಿದ್ಯಾನಿಲಯದ ವಿವಿಧ ಅಧಿಕಾರಿಗಳು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ತರಬೇತಿ ಕಾರ್ಯಕ್ರಮದ ನಿರ್ದೇಶಕ ಡಾ. ಸಿ.ಎಂ. ಮಠಪತಿ ಸ್ವಾಗತಿಸಿದರು. ಸಹ-ನಿರ್ದೇಶಕ ಡಾ. ಗಣೇಶ ಎಸ್.ಆರ್. ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ದಾನೇಶ್ವರಿ ಹಿರೇಮಠ, ಅಶ್ವಿನಿ ತೊರವಿ ಹಾಗೂ ಶಿಫಾ ಮುಶ್ರೀಫ್ ಕಾರ್ಯಕ್ರಮ ನಿರೂಪಿಸಿದರು.































