
ಹುಳಿಯಾರು, ಆ. ೮- ಗೃಹಬಳಕೆಗೆ ಮೀಸಲಾದ ೧೪.೨ ಕೆ.ಜಿ. ತೂಕದ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ಎಂ. ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಆದೇಶದಂತೆ ೧೪.೨ ಕೆ.ಜಿ. ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮನೆ ಬಳಕೆಗೆ ಮಾತ್ರ ಉಪಯೋಗಿಸಬೇಕು. ಆದರೆ ಕೆಲವು ಹೋಟೆಲ್‌ಗಳು, ಟೀ ಅಂಗಡಿಗಳು, ಬೇಕರಿಗಳು, ರಸ್ತೆ ಬದಿಯ ಎಗ್ ರೈಸ್ ಅಂಗಡಿಗಳು, ಕೋಳಿ ಮಾಂಸದ ಅಂಗಡಿಗಳು ಹಾಗೂ ಇತರೆ ತಿಂಡಿ ವ್ಯಾಪಾರ ಕೇಂದ್ರಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಇಂತಹ ಅಕ್ರಮ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರವು ಪರಿಶೀಲನಾ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದ್ದು, ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ಗೃಹಬಳಕೆಯ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳುವುದರ ಜತೆಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ.
ಹೀಗಾಗಿ ಯಾವುದೇ ಕಾರಣಕ್ಕೂ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಉಪಯೋಗಿಸಬಾರದು. ಒಂದು ವೇಳೆ ವಾಣಿಜ್ಯ ಕೇಂದ್ರಗಳಲ್ಲಿ ಇಂತಹ ಅಕ್ರಮ ಬಳಕೆ ಕಂಡು ಬಂದರೆ ಸಿಲಿಂಡರ್‌ಗಳನ್ನು ಸರ್ಕಾರದ ಪರವಾಗಿ ವಶಪಡಿಸಿಕೊಳ್ಳಲಾಗುವುದು. ಜತೆಗೆ ಅಕ್ರಮ ಬಳಕೆದಾರರ ವಿರುದ್ಧ ಎಲ್‌ಪಿಜಿ (ನಿಯಂತ್ರಣ) ಆದೇಶ-೨೦೦೦ ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಮಮತಾ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


































