
ಬೆಂಗಳೂರು, ಆ. ೮- ಬಿಡದಿ ಟೌನ್‌ಶಿಪ್ ವಿರೋಧಿಸಿ ನಾಳೆಯಿಂದ ಜೆಡಿಎಸ್ ನಡೆಸುತ್ತಿರುವ ಹೋರಾಟದಲ್ಲಿ ಬಿಜೆಪಿಯು ಭಾಗಿಯಾಗಲಿದ್ದು, ಎರಡು ಪಕ್ಷಗಳು ಜಂಟಿ ಹೋರಾಟ ನಡೆಸಲಿವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ಸಮನ್ವಯ ಸಂಬಂಧ ಇಂದು ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರೊಂದಿಗೆ ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಯಾವುದೇ ಹೋರಾಟಗಳನ್ನು ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಲಿವೆ. ಬಿಡದಿ ಟೌನ್‌ಶಿಪ್ ವಿರೋಧಿಸಿ ನಾಳೆಯಿಂದ ಆರಂಭವಾಗಲಿರುವ ಪಾದಯಾತ್ರೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗಿಯಾಗುತ್ತಾರೆ. ನಾನು ನಾಳೆ ನಡೆಯುವ ಪಾದಯಾತ್ರೆ ಚಾಲನಾ ಸಮಾರಂಭದಲ್ಲೂ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.
ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಸಹ ಈಗಾಗಲೇ ಪ್ರತಿಭಟನೆ ನಡೆಸಿದೆ. ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲೂ ಎರಡು ಪಕ್ಷಗಳು ಸೇರಿ ಬೃಹತ್ ಪ್ರತಿಭಟನಾ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದರು.
ಸದನದ ಒಳಗೂ, ಹೊರಗೂ ಎರಡು ಪಕ್ಷಗಳು ಸರ್ಕಾರದ ವಿರುದ್ಧ ಜಂಟಿ ಹೋರಾಟ ನಡೆಸಲಿವೆ. ಅಧಿವೇಶನದಲ್ಲಿ ಯಾವೆಲ್ಲಾ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕು ಎಂಬ ಬಗ್ಗೆ ಅಧಿವೇಶನ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ಬಾಬು, ಬೋಜೇಗೌಡ, ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ನಾನು ಕುಳಿತು ಚರ್ಚೆ ಮಾಡುತ್ತೇವೆ ಎಂದು ಅಶೋಕ್ ಹೇಳಿದರು.
ಸಮನ್ವಯ ಸಮಿತಿ ರಚನೆ
ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ, ಒಂದಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಹಾಗೂ ಎಲ್ಲಾ ವಿಚಾರಗಳಲ್ಲೂ ಒಗ್ಗಟ್ಟು ಕಾಯ್ದುಕೊಳ್ಳುವ ಸಂಬಂಧ ಎರಡು ಪಕ್ಷಗಳ ಸಮನ್ವಯ ಸಮಿತಿ ರಚನೆಯಾಗಲಿದೆ. ನಾನು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೂ ಈ ಬಗ್ಗೆ ಮಾತನಾಡಿದ್ದೇನೆ. ಎರಡು ಪಕ್ಷಗಳ ಐವರು ಮುಖಂಡರನ್ನೊಳಗೊಂಡ ಸಮನ್ವಯ ಸಮಿತಿ ರಚನೆ ಸದ್ಯದಲ್ಲೇ ಆಗಲಿದೆ ಎಂದು ಅವರು ಹೇಳಿದರು.
ಇಂದಿನ ಸಭೆಯಲ್ಲಿ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಸಿ.ಸಿ. ಪಾಟೀಲ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು, ಬೋಜೇಗೌಡ ಸೇರಿದಂತೆ ಎರಡು ಪಕ್ಷಗಳ ಹಲವು ನಾಯಕರು ಭಾಗಿಯಾಗಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಶಿಕಾರಿಪುರದಲ್ಲಿ ತುರ್ತು ಕಾರ್ಯಕ್ರಮ ಇರುವುದರಿಂದ ಈ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಅವರು ತಿಳಿಸಿದರು.

































