ಚಿಕ್ಕಬಳ್ಳಾಪುರ.ಆ.೧೯- ಇದೇ ೨೨ ರಂದು ಚಿಂತಾಮಣಿ ನಗರದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ವಿವಿಧ ಸಚಿವರುಗಳು ಆಗಮಿಸಿ ನೂತನ ಅಂಬೇಡ್ಕರ್ ಭವನ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಚಿಂತಾಮಣಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ. ಸುಧಾಕರ್ ತಿಳಿಸಿದರು.
ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ೫ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದ ಸಭಾ ಭವನ ಹಾಗೂ ಸಭಾಂಗಣವನ್ನು ೭.೫ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು,ಇದರ ಉದ್ಘಾಟನೆ ನಡೆಯಲಿದೆ.೧.೭೫ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಆಜಾದ್ ಚೌಕ್ ವೃತ್ತದ ಅಭಿವೃದ್ಧಿ ಕಾಮಗಾರಿಗಳನ್ನೂ ಲೋಕಾರ್ಪಣೆ ಮಾಡಲಾಗುವುದು.ಇದೇ ಸಂದರ್ಭದಲ್ಲಿ ೨೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಭವನದ ಅಂಬೇಡ್ಕರ್ ಅನುಭವ ಕೇಂದ್ರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಉದ್ಘಾಟನೆ ನೆರವೇರಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್, ಸಚಿವರಾದ ಈಶ್ವರ್ ಖಂಡ್ರೆ, ಕೆ.ಎಚ್. ಮುನಿಯಪ್ಪ, ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಹಾಗೂ ಕೋಲಾರ ಸಂಸದ ಮಲ್ಲೇಶ್ ಬಾಬು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಶಾಸಕರು ತಿಳಿಸಿದರು.
ಜಿಲ್ಲಾಧಿಕಾರಿ ಜಿ. ಪ್ರಭು ಮಾತನಾಡಿ,ಕಾರ್ಯಕ್ರಮವನ್ನು ಸರ್ಕಾರದ ಶಿಷ್ಟಾಚಾರದಂತೆ ಯಶಸ್ವಿಯಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಹ್ವಾನ ಪತ್ರಿಕೆಗಳ ಮುದ್ರಣ ಮತ್ತು ವಿತರಣೆ, ವೇದಿಕೆ ಸಿದ್ಧತೆ, ಅಲಂಕಾರ, ವಿದ್ಯುತ್ ದೀಪಾಲಂಕಾರ, ಆಸನ ವ್ಯವಸ್ಥೆ, ಊಟ, , ಕುಡಿಯುವ ನೀರು, ನಗರದ ಸ್ವಚ್ಛತೆ,ಶೌಚಾಲಯ ವ್ಯವಸ್ಥೆ,ವಾಹನ ನಿಲುಗಡೆ, ಸಂಚಾರ ನಿಯಂತ್ರಣ ಹಾಗೂ ಪೊಲೀಸ್ ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷಾ, ಆಜಾದ್ ಚೌಕ್ ಲೋಕಾರ್ಪಣೆಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್ ಹಾಗೂ ಅಂಬೇಡ್ಕರ್ ಭವನದ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ಡಿ,ಎಚ್.ಅಶ್ವಿನ್‌ರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.ಆಯಾ ಅಧಿಕಾರಿಗಳು ಈ ಮೂರು ಸ್ಥಳಗಳಲ್ಲಿ ಗಣ್ಯರನ್ನು ಆಹ್ವಾನಿಸುವುದು ಸೇರಿದಂತೆ ಕಾರ್ಯಕ್ರಮದ ಎಲ್ಲ ಪೂರ್ವಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಂಡು ಕಾರ್ಯಕ್ರಮ ಅಂದು ಸುಸೂತ್ರವಾಗಿ ನಡೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್ ಬಾಬು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
























