
ಬೆಂಗಳೂರು, ಆ.೨೨-ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನಪರ ಹಾಗೂ ಅಭಿವೃದ್ಧಿಪರ ಆಡಳಿತ ನೀಡುತ್ತಿರುವುದನ್ನು ಸಹಿಸದೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವುದನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಇಂದು ಕಾಂಗ್ರೆಸ್ ಭವನದ ಬಳಿ ಅಣಕು ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರಾದ ಶ್ರೀ ಎಸ್. ಮನೋಹರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಬಿಜೆಪಿ ಆಡಳಿತದ ಅವಧಿಯಲ್ಲಿ ಕೇಳಿಬಂದಿರುವ ಬಗರ್ ಹುಕುಂ, ಲಂಚ, ಹೌಸಿಂಗ್ ಬೋರ್ಡ್ ಅಕ್ರಮಗಳು, ಕೋವಿಡ್ ಸಂದರ್ಭದಲ್ಲಿ ೪೦% ಕಮಿಷನ್ ಹಾಗೂ ಬೆಡ್ ಬ್ಲಾಕಿಂಗ್ ಸೇರಿದಂತೆ ವಿವಿಧ ಭ್ರಷ್ಟಾಚಾರ ಮತ್ತು ಅಕ್ರಮಗಳ ಆರೋಪಗಳ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನೆಗಳನ್ನು ಎತ್ತಿದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಹಣದಲ್ಲಿ ಎಷ್ಟು ಹಣ ಪಿಎಂ ಕೇರ್ಸ್ ನಿಧಿಗೆ ಅಥವಾ ಬಿಜೆಪಿ ಕೇಂದ್ರ ಕಚೇರಿಗೆ ತಲುಪಿದೆ ಎಂಬುದರ ಕುರಿತು ಪಾರದರ್ಶಕವಾಗಿ ಉತ್ತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಾ, ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುತ್ತಿರುವ ಸಂದರ್ಭದಲ್ಲಿ, ಯಾವುದೇ ಆಧಾರವಿಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದು ರಾಜಕೀಯ ಅಸೂಯೆಯ ಪ್ರತೀಕವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಭ್ರಷ್ಟಾಚಾರದ ಆರೋಪಗಳನ್ನು ಹೊತ್ತಿರುವವರೊಂದಿಗೆ ರಾಜಕೀಯವಾಗಿ ಕೈಜೋಡಿಸಿಕೊಂಡು, ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದರು. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಗಮನಿಸುತ್ತಿದ್ದು, ಆಧಾರರಹಿತ ಆರೋಪಗಳಿಗೆ ಜನರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಹೇಳಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಆನಂದ್ ಕುಮಾರ್ ಎಂ.ಎಸ್., ಬೆಂಗಳೂರು ಕೇಂದ್ರ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್, ಪುಟ್ಟರಾಜು, ಲಕ್ಷ್ಮೀನಾರಾಯಣ, ನವೀನ್, ಬಳೇಶ್, ಪವನ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
































