
ಸಂಜೆವಾಣಿ ವಾರ್ತೆ,
ವಿಜಯಪುರ, ಆ. ೨೯: ಜಿಲ್ಲೆಯಾದ್ಯಂತ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ವಿಜಯಪುರ ಜಿಲ್ಲೆಯ ೧೩ ತಾಲೂಕುಗಳ ಪೈಕಿ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕರ್ನಾಟಕ ರೈತ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲೆಯ ಎಲ್ಲ ತಾಲೂಕುಗಳನ್ನು ಸಂಪೂರ್ಣ ಬರಪೀಡಿತವೆಂದು ಘೋಷಿಸಿ ರೈತರಿಗೆ ತಕ್ಷಣ ಬರ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಮೂಲಕ ಮನವಿ ಸಲ್ಲಿಸಲಾಗಿದೆ.
ಸರ್ಕಾರದ ನಿರ್ಧಾರಕ್ಕೆ ರೈತರ ಪ್ರಶ್ನೆ
ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಮಹಾದೇವಪ್ಪ ತೇಲಿ ಮಾತನಾಡಿ, ರಾಜ್ಯದಲ್ಲಿ ಹಿಂದೆAದೂ ಕಂಡರಿಯದAತಹ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವೇ ರಾಜ್ಯದ ೧೦೧ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. ಆದರೆ ವಿಜಯಪುರ ಜಿಲ್ಲೆಯ ೧೩ ತಾಲೂಕುಗಳ ಪೈಕಿ ಕೇವಲ ವಿಜಯಪುರ, ಕೊಲ್ಹಾರ ಹಾಗೂ ನಿಡಗುಂದಿ ತಾಲೂಕುಗಳನ್ನು ಮಾತ್ರ ಬರಪೀಡಿತ ಪಟ್ಟಿಗೆ ಸೇರಿಸಿರುವುದು ತಾರತಮ್ಯದ ನಿರ್ಧಾರವಾಗಿದೆ ಎಂದು ಆರೋಪಿಸಿದರು.
ಜಿಲ್ಲೆಯ ಉಳಿದ ೧೦ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ ಎಂಬುದಾದರೆ ಎಷ್ಟು ಮಳೆಯಾಗಿದೆ? ಯಾವ ಭಾಗದಲ್ಲಿ ಬೆಳೆಗಳು ಉತ್ತಮವಾಗಿವೆ? ಎಷ್ಟು ಪ್ರಮಾಣದ ಬಿತ್ತನೆ ಯಶಸ್ವಿಯಾಗಿದೆ? ಎಂಬ ಅಂಕಿ-ಅAಶಗಳನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಉಸ್ತುವಾರಿ ಸಚಿವರ ಪರಿಶೀಲನೆಯಲ್ಲೇ ಬರದ ಚಿತ್ರಣ
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಜಿಲ್ಲೆಯಾದ್ಯಂತ ನಿರೀಕ್ಷಿತ ಮಳೆಯಾಗದೆ ಬೆಳೆಗಳು ಹಾನಿಗೊಳಗಾಗಿದ್ದು, ಭೀಕರ ಬರದ ವಾತಾವರಣ ನಿರ್ಮಾಣವಾಗಿದೆ ಎಂದು ಅವರೂ ಹೇಳಿಕೆ ನೀಡಿದ್ದಾರೆ. ಹೀಗಿರುವಾಗ ಸರ್ಕಾರ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತವೆಂದು ಘೋಷಿಸಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ರೈತ ಸಂಘ ದೂರಿದೆ.
ಪರಿಹಾರಕ್ಕಾಗಿ ರಾಜಕೀಯ ಇಚ್ಛಾಶಕ್ತಿ ತೋರಿಸಿ
ಬರ ಪರಿಸ್ಥಿತಿಯ ಬಗ್ಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಜನಪ್ರತಿನಿಧಿಗಳಿಗೆ ಸಂಪೂರ್ಣ ಮಾಹಿತಿ ಇದೆ. ಆದರೂ ಕೇಂದ್ರ ಸರ್ಕಾರದಿಂದ ಅಗತ್ಯ ಬರ ಪರಿಹಾರ ಅನುದಾನ ಬಿಡುಗಡೆ ಮಾಡಿಸುವಲ್ಲಿ ವಿಫಲವಾಗಿರುವುದು ಖಂಡನೀಯ. ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪ ಬದಿಗಿಟ್ಟು ಎಲ್ಲ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಂಘ ಒತ್ತಾಯಿಸಿದೆ.
ಕೇವಲ ಬರ ವೀಕ್ಷಣೆ, ಪರಿಶೀಲನೆ ಮತ್ತು ಹೇಳಿಕೆಗಳಿಗೆ ಸೀಮಿತವಾಗದೆ ರೈತರ ಖಾತೆಗೆ ಪರಿಹಾರ ಹಣ ತಲುಪಿಸುವ ಕಾರ್ಯವಾಗಬೇಕು. ಜಿಲ್ಲೆಯ ಎಲ್ಲಾ ೧೩ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಬೆಳೆ ನಷ್ಟ ಪರಿಹಾರ ಹಾಗೂ ಅಗತ್ಯ ನೆರವು ನೀಡದಿದ್ದರೆ ರೈತರ ಪರವಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತ ಸಂಘ ಎಚ್ಚರಿಸಿದೆ.
‘ರೈತರ ಪರ ನಿಲ್ಲಿ; ಇಲ್ಲವಾದರೆ ರಾಜೀನಾಮೆ ನೀಡಿ’
ಸರ್ಕಾರದ ಬರ ಘೋಷಣೆಯಲ್ಲಿ ವಿಜಯಪುರ ಜಿಲ್ಲೆಗೆ ಅನ್ಯಾಯವಾಗಿದ್ದರೆ ಜಿಲ್ಲೆಯ ಶಾಸಕರು ಪಕ್ಷಭೇದ ಮರೆತು ರೈತರ ಪರ ಧ್ವನಿ ಎತ್ತಬೇಕು. ಅಗತ್ಯವಿದ್ದರೆ ಸಚಿವರು ಹಾಗೂ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ರೈತರ ಪರ ನಿಲ್ಲುವ ಮೂಲಕ ಬದ್ಧತೆ ಪ್ರದರ್ಶಿಸಬೇಕು ಎಂದು ರೈತ ಸಂಘ ಆಗ್ರಹಿಸಿದೆ.
































