
ಸಂಜೆವಾಣಿ ವಾರ್ತೆ,
ವಿಜಯಪುರ, ಆ. ೨೯: ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು, ಯುವ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಪ್ರತಿದಿನ ಕ್ರೀಡಾಭ್ಯಾಸಕ್ಕಾಗಿ ಜಿಲ್ಲಾ ಕ್ರೀಡಾಂಗಣವನ್ನು ಅವಲಂಬಿಸಿದ್ದಾರೆ. ಆದರೆ ಕ್ರೀಡಾಂಗಣದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ, ಸಮರ್ಪಕ ನಿರ್ವಹಣೆಯ ಅಭಾವ ಹಾಗೂ ವಿವಿಧ ಶುಲ್ಕಗಳ ಹೆಚ್ಚಳದಿಂದಾಗಿ ಕ್ರೀಡಾಪಟುಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪರಿಷತ್ ಆರೋಪಿಸಿದೆ.
ಕ್ರೀಡಾಂಗಣವು ಕ್ರೀಡಾಪಟುಗಳ ಪ್ರತಿಭೆ ಬೆಳೆಸುವ ಪ್ರಮುಖ ಕೇಂದ್ರವಾಗಬೇಕಾದರೆ, ಮೊದಲು ಅಲ್ಲಿನ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕುಡಿಯುವ ನೀರಿನ ಸಮಸ್ಯೆ
ಕ್ರೀಡಾಂಗಣದಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಕ್ರೀಡಾಭ್ಯಾಸಕ್ಕೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳಿಗೆ ಶುದ್ಧ ಕುಡಿಯುವ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಬೇಸಿಗೆ ಮಾತ್ರವಲ್ಲದೆ ಎಲ್ಲ ಋತುಗಳಲ್ಲಿಯೂ ಸಮಸ್ಯೆ ಮುಂದುವರಿದಿರುವುದರಿAದ ಸಂಬAಧಿಸಿದ ಅಧಿಕಾರಿಗಳು ಕೂಡಲೇ ಗಮನಹರಿಸಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.
ಸಂಜೆ ಕ್ರೀಡಾಭ್ಯಾಸಕ್ಕೆ ಬೆಳಕಿನ ಕೊರತೆ
ಸಂಜೆ ವೇಳೆಯಲ್ಲಿ ಕ್ರೀಡಾಭ್ಯಾಸ ನಡೆಸುವ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳಿಗೆ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದಿರುವುದು ಮತ್ತೊಂದು ಪ್ರಮುಖ ಸಮಸ್ಯೆಯಾಗಿದೆ. ಕ್ರೀಡಾಂಗಣದಲ್ಲಿ ಅಳವಡಿಸಿರುವ ಕೆಲವು ವಿದ್ಯುತ್ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಕತ್ತಲಿನಲ್ಲಿಯೇ ಕ್ರೀಡಾಭ್ಯಾಸ ಮಾಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಆದ್ದರಿಂದ ಅಗತ್ಯವಿರುವ ಸ್ಥಳಗಳಲ್ಲಿ ಹೊಸ ವಿದ್ಯುತ್ ದೀಪಗಳನ್ನು ಅಳವಡಿಸಿ, ಈಗಿರುವ ಬೆಳಕಿನ ವ್ಯವಸ್ಥೆಯನ್ನು ದುರಸ್ತಿ ಮಾಡಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಜಿಲ್ಲಾ ಕ್ರೀಡಾಂಗಣವನ್ನು ಸುಸಜ್ಜಿತ ಕ್ರೀಡಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಮೂಲಕ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
































