Home ಮುಖಪುಟ ಸುದ್ದಿ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಸಭೆ

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಸಭೆ

ಬೆಂಗಳೂರು, ಸೆ. ೧೬- ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಜಿಲ್ಲಾಧ್ಯಕ್ಷರುಗಳ ಸಭೆ ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.


ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚೆಗೆ ಹೊಸದಾಗಿ ನೇಮಕಗೊಂಡಿರುವ ಎಲ್ಲ ಜಿಲ್ಲಾಧ್ಯಕ್ಷರುಗಳ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಪ್ರಮುಖ ನಾಯಕರುಗಳು ಭಾಗಿಯಾಗಿದ್ದರು.


ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಚರ್ಚೆಗಳು ನಡೆದವು.
ಈ ವರ್ಷದ ಅಂತ್ಯದೊಳಗೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ನಡೆಯಲಿದ್ದು, ಈ ಚುನಾವಣೆಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಲು ಏನೆಲ್ಲಾ ಕಾರ್ಯಕ್ರಮಗಳನ್ನು ರೂಪಿಸಬೇಕು, ಅಭ್ಯರ್ಥಿಗಳ ಗುರುತಿಸುವಿಕೆ, ಚುನಾವಣಾ ಪ್ರಚಾರ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗ್ಗೆಯೂ ಕಾಂಗ್ರೆಸ್ ನಾಯಕರು ಜಿಲ್ಲಾಧ್ಯಕ್ಷರುಗಳೊಂದಿಗೆ ಚರ್ಚಿಸಿ, ಮಾರ್ಗದರ್ಶನ ಮಾಡಿದರು.


ಸ್ಥಳೀಯ ಸಂಸ್ಥೆಗಳ ಚುನಾವಣೆ ಗೆಲುವುದು ಪಕ್ಷಕ್ಕೆ ಅತ್ಯಂತ ಮಹತ್ವದ್ದಾಗಿದೆ. ಹಾಗಾಗಿ ಜಿಲ್ಲಾಧ್ಯಕ್ಷರುಗಳು ಈಗಿನಿಂದಲೇ ಜಿಲ್ಲಾ ಮಟ್ಟದಲ್ಲಿ ಎಲ್ಲ ನಾಯಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಕೆಲಸ ಮಾಡುವಂತೆಯೂ ಈ ಸಭೆಯಲ್ಲಿ ಸೂಚನೆ ನೀಡಲಾಯಿತು.


ಎಸ್‌ಐಆರ್‌ಗೆ ಸಂಬಂಧಿಸಿದಂತೆ ಪಕ್ಷ ನೇಮಕ ಮಾಡಿದ್ದ ವೀಕ್ಷಕರ ಜತೆಯೂ ಕಾಂಗ್ರೆಸ್ ನಾಯಕರುಗಳೂ ಸಭೆ ನಡೆಸಿದ್ದು, ವೀಕ್ಷಕರಿಂದ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದುಕೊಂಡು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವವರನ್ನು ಸೇರ್ಪಡೆ ಮಾಡುವ ಸಂಬಂಧ ಏನೆಲ್ಲಾ ಪ್ರಕ್ರಿಯೆಗಳನ್ನು ನಡೆಸಬೇಕು ಎಂಬ ಬಗ್ಗೆ ಸೂಚನೆಯನ್ನು ನಾಯಕರು ನೀಡಿದರು.