
ಕಲಬುರಗಿ: ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ಶಿಕ್ಷಣ ಪದ್ಧತಿಗಳಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಮಕ್ಕಳಿಗೆ ಕೇವಲ ಪಠ್ಯಾಧಾರಿತ ಶಿಕ್ಷಣ ನೀಡುವುದಷ್ಟೇ ಅಲ್ಲದೆ, ಮೌಲ್ಯಗಳು, ಸಂಸ್ಕಾರ, ಮಾನವೀಯತೆ ಹಾಗೂ ಜೀವನ ಕೌಶಲ್ಯಗಳನ್ನು ಒಳಗೊಂಡ ಗುಣಮಟ್ಟದ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮರತೂರ ಗ್ರಾಮದ ಹಿರಿಯ ಮುಖಂಡರಾದ ಅಜೀತಕುಮಾರ್ ಪೋಲಿಸ್ ಪಾಟೀಲ್ ಅಭಿಪ್ರಾಯಪಟ್ಟರು.
ಅವರು ಮರತೂರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮಿತಾಕ್ಷರ ಮಿತ್ರ ಬಳಗ ಹಾಗೂ ಪ್ರಜ್ಞಾ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳ ಶಿಕ್ಷಣಕ್ಕೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಇದ್ದು, ಅವರಿಗೆ ಅಗತ್ಯವಾದ ಶೈಕ್ಷಣಿಕ ಸೌಲಭ್ಯ, ಪ್ರೋತ್ಸಾಹ ಹಾಗೂ ಮಾರ್ಗದರ್ಶನ ದೊರೆತರೆ ಅವರು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬಹುದು. ಮಕ್ಕಳಿಗೆ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ, ಶಿಸ್ತು, ಜವಾಬ್ದಾರಿ ಮತ್ತು ಸಾಮಾಜಿಕ ಕಾಳಜಿಯನ್ನು ಬೆಳೆಸುವ ಕೆಲಸವೂ ನಡೆಯಬೇಕು ಎಂದು ಅವರು ಹೇಳಿದರು.
ಶಿಕ್ಷಣ ತಜ್ಞ ಕೆ.ಎಂ. ವಿಶ್ವನಾಥ ಮಾರತೂರ ಮಾತನಾಡಿ, ಗ್ರಾಮೀಣ ಹಾಗೂ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶಗಳನ್ನು ತಲುಪಿಸುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದೆ. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ; ಅದು ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಅಭಿವೃದ್ಧಿಗೆ ಪ್ರಮುಖ ಅಡಿಪಾಯವಾಗಿದೆ. ಮಕ್ಕಳ ಅಗತ್ಯಗಳನ್ನು ಗುರುತಿಸಿ, ಅವರಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿ ಹಾಗೂ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.
ಪ್ರಜ್ಞಾ ಫೌಂಡೇಷನ ಅಧ್ಯಕ್ಷ ಕಾಶೀನಾಥ ಪುಜಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಸೇರಿದಂತೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ಅವರ ಕಲಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಇಂತಹ ಸಾಮಾಜಿಕ ಕಾಳಜಿಯ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಹೇಮನಾಥ ಜಾಧವ ಮಾತನಾಡಿ ನಮ್ಮ ಶಾಲೆಯ ಮಕ್ಕಳಿಗೆ ಸಮುದಾಯದ ಸಹಭಾಗಿತ್ವ ಸಹಕಾರದಿಂದ ಶಾಲಾ ಬ್ಯಾಗ್ ವಿತರಣೆ ಮಾಡುತ್ತಿರುವುದು ಅತ್ಯಂತ ಸಂತೋಷವಾಗಿದೆ ಎಂದರು.
ಶಾಲೆಯ ಹಿರಿಯ ಶಿಕ್ಷಕಿ ಸುಮಂಗಲಾ ಮಾತನಾಡಿ ನಮ್ಮ ಕೈಯಲ್ಲಿ ಬೆಳೆದು ಕಲಿತ ವಿದ್ಯಾರ್ಥಿಗಳು ಅವರ ಶಾಲೆಗೆ ಕೊಡುಗೆ ನೀಡುತ್ತಿರುವುದು ಅತ್ಯಂತ ಸಂತೋಷದ ಸಂದರ್ಭವಾಗಿದೆ. ಇಂದು ಬ್ಯಾಗ್ ವಿತರಣೆ ಮಾಡಿ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಶಾಲೆಯ ವಿದ್ಯಾರ್ಥಿನಿಯರಿಗೆ ಶಾಲಾ ಬ್ಯಾಗಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪ್ಪಾಸಾಬ, ಶರಣು ಜಬರಿ, ಶಿವಮೂರ್ತಿ ಹಿರೆಮಠ, ಪ್ರದೀಪ ಸೇರಿದಂತೆ ಮಿತಾಕ್ಷರ ಮಿತ್ರ ಬಳಗದ ಸದಸ್ಯರು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಹಾಗೂ ಪೋಷಕರು ಹಾಜರಿದ್ದರು.































