
ನವದೆಹಲಿ, ಅ.೧೨-ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸುವ ಮೂಲಕ ಕೇಂದ್ರ ಸರ್ಕಾರ ದೊಡ್ಡ ತಪ್ಪು ಮಾಡಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.
ಸಂವಿಧಾನವನ್ನು ರಕ್ಷಿಸುವ ಹೋರಾಟ ಇದಾಗಿದ್ದು ಇದು ತಮಗೆ ಅಥವಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಬಂಧಿಸಿದ್ದಲ್ಲ ಎಂದು ಗುಡುಗಿದ್ದಾರೆ.
ಮತಗಳ್ಳತನ ಮತ್ತು ಚುನಾವಣಾ ಪ್ರಕ್ರಿಯೆ ಯಲ್ಲಿನ ಅಕ್ರಮಗಳ ಆರೋಪದ ವಿರುದ್ಧ ಇಂಡಿಯಾ ಮೈತ್ರಿಕೂಟ ಸುಪ್ರೀಂ ಕೋರ್ಟ್‌ಗೆ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸುತ್ತಿರುವ ಹೊತ್ತಲ್ಲೇ ನವದೆಹಲಿಯಲ್ಲಿ ಇಂದು
ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ತಾವು ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಕುರಿತು ಕಳವಳ ವ್ಯಕ್ತಪಡಿಸಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದೇವೆ ಎಂದು ರಾಹುಲ್ ಗಾಂಧಿ ತಿಳಿಸಿದರು.
ಇಂಡಿಯಾ ಮೈತ್ರಿಕೂಟದ ನಾಯಕರು ಒಟ್ಟಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎಂದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿ ರಕ್ಷಿಸಲು ಪ್ರಯತ್ನಿಸುತ್ತಿದೆ.ಸಿಇಸಿಗೆ ನೀಡುತ್ತಿರುವ ಭದ್ರತೆಯ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ ೨೦ ಸಾವಿರದಿಂದ ೩೦ ಸಾವಿರ ಪೊಲೀಸರನ್ನು ಬೀದಿಗಳಲ್ಲಿ ನಿಯೋಜಿಸಬೇಕೆಂದು ಪ್ರತಿಪಾದಿಸಿದರು.
“ಸಿಇಸಿಗೆ ಎಷ್ಟು ಹೆಚ್ಚು ರಕ್ಷಣೆ ನೀಡುತ್ತಾರೋ, ಅಷ್ಟು ಅಂತಿಮವಾಗಿ ಅವರ ನಿಯಂತ್ರಕರ ಬಳಿಗೆ ನಾವು ತಲುಪುತ್ತೇವೆ” ಎಂದು ತಿಳಿಸಿದರು.
ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ ಅವರು, ಈ ವಿಚಾರದಲ್ಲಿ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು. ಆದರೆ, ಅವರು ಮಾಡಿರುವ ಆರೋಪಗಳು ಸ್ವತಂತ್ರವಾಗಿ ದೃಢಪಟ್ಟಿಲ್ಲ.ಪೊಲೀಸರಿಗೂ ಈ ಬಗ್ಗೆ ಅಸಮಾಧಾನವಿದೆ ಎಂದ ರಾಹುಲ್ ಹೇಳಿದರು.























