
ಬೆಂಗಳೂರು, ಅ.೧೨- ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ಕೊನೆಯ ಕ್ಷಣದಲ್ಲಿ ಸ್ಥಗಿತಗೊಂಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಗಿ ಭದ್ರತೆಯಲ್ಲಿ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, ತುಮಕೂರು ತಲುಪಿದ ಬಳಿಕ ವಾಹನವನ್ನು ಹಿಂದಕ್ಕೆ ತಿರುಗಿಸಿ ಮತ್ತೆ ಬೆಂಗಳೂರಿಗೆ ಕರೆತಂದಿದ್ದಾರೆ.
ಕಳೆದ ಅ.೧೦ರಂದು ಸಂಜೆ ಸಿಎಆರ್ ಎಸ್ಕಾರ್ಟ್ ಪೊಲೀಸರು ಬಿಗಿ ಭದ್ರತೆಯೊಂದಿಗೆ ಪ್ರಜ್ವಲ್ ರೇವಣ್ಣನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕರೆದೊಯ್ಯುತ್ತಿದ್ದರು. ಪೊಲೀಸ್ ವಾಹನ ತುಮಕೂರು ತಲುಪುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಂದ ಬೆಂಗಾವಲು ಪಡೆಗೆ ತುರ್ತು ಕರೆ ಬಂದಿದೆ. ಮೇಲಧಿಕಾರಿಗಳ ಸೂಚನೆಯಂತೆ ಪೊಲೀಸರು ತಕ್ಷಣ ವಾಹನವನ್ನು ವಾಪಸ್ ತಿರುಗಿಸಿ, ರಾತ್ರಿ ವೇಳೆಯೇ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಎರಡು ಪ್ರಮುಖ ಪ್ರಕರಣಗಳ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಯ ಕೆಲವು ಪ್ರಮುಖ ಹಂತಗಳಲ್ಲಿ ಅವರು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕಾದ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಿದರೆ, ಪ್ರತಿ ಬಾರಿ ವಿಚಾರಣೆಗಾಗಿ ಅಲ್ಲಿಂದ ಬೆಂಗಳೂರಿಗೆ ಕರೆತರುವುದು ಭದ್ರತೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಸವಾಲಾಗಬಹುದು ಎಂಬ ವಿಚಾರ ಚರ್ಚೆಗೆ ಬಂದಿದೆ ಎನ್ನಲಾಗಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರುಪಡಿಸುವುದು ಹಾಗೂ ಭದ್ರತಾ ವ್ಯವಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು, ಕೊನೆಯ ಕ್ಷಣದಲ್ಲಿ ಸ್ಥಳಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಸ್ಥಳಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಹಿರಿಯ ಅಧಿಕಾರಿಗಳು ನೀಡಿದ ನಿಖರ ಕಾರಣದ ಕುರಿತು ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ.























