
ವಿಜಯಪುರ, ಅ.16 : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ 2026ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಅ.22ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ ಎಂದು ಪ್ರಾಧಿಕಾರದ ಸದಸ್ಯ ಸಂಚಾಲಕ ಎಸ್. ಗಂಗಾಧರಯ್ಯ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅನುವಾದ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ಸಾಹಿತಿಗಳು ಹಾಗೂ ಅನುವಾದಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು.
2026ನೇ ಸಾಲಿನ ಗೌರವ ಪ್ರಶಸ್ತಿಗೆ ಡಾ. ಸೂರ್ಯಕಾಂತ್ ಎಸ್. ಸೂಜ್ಯಾತ್, ಡಾ. ಮಲರ್ ವಿಳಿ ಕೆ., ಡಾ. ಬಂಜಗೆರೆ ಜಯಪ್ರಕಾಶ, ಪೆÇ್ರ. ಸಿ. ನಾಗಣ್ಣ ಹಾಗೂ ಡಾ. ಕೇಶವ ಶರ್ಮ ಕೆ. ಆಯ್ಕೆಯಾಗಿದ್ದಾರೆ.
2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಡಾ. ಕೆ. ಶ್ರೀನಾಥ, ಡಾ. ಪ್ರಮೋದ್ ಮುತಾಲಿಕ, ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ, ಕನಕರಾಜ ಆರನಕಟ್ಟೆ, ಅಶೋಕ ಕುಮಾರ ಎಂ. ಹಾಗೂ ಚಂದ್ರಶೇಖರ ಮದಭಾವಿ ಆಯ್ಕೆಯಾಗಿದ್ದಾರೆ.
ಅನುವಾದ ಸಾಹಿತ್ಯದ ಬೆಳವಣಿಗೆಗೆ ಪ್ರಾಧಿಕಾರ ವಿಶೇಷ ಆದ್ಯತೆ ನೀಡುತ್ತಿದ್ದು, ಹೊಸ ಅನುವಾದಕರಿಗೆ ಅವಕಾಶ ಕಲ್ಪಿಸುವ ಮೂಲಕ ವಿವಿಧ ಭಾಷೆಗಳ ಉತ್ತಮ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಲು ಪೆÇ್ರೀತ್ಸಾಹಿಸಲಾಗುತ್ತಿದೆ. ಮೌಲ್ಯಯುತ ಹಾಗೂ ಚಿಂತನಶೀಲ ಸಾಹಿತ್ಯ ರಚನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಹಿರಿಯ-ಕಿರಿಯ ಸಾಹಿತಿಗಳನ್ನು ಗುರುತಿಸಿ ನಗದು ಬಹುಮಾನ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಅ.22ರಂದು ನಡೆಯುವ ಸಮಾರಂಭವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಉದ್ಘಾಟಿಸಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಗಳನ್ನು ಪ್ರದಾನ ಮಾಡಲಿದ್ದಾರೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆರ್ಂಟ್ಸ್ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾಹಿತಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ಬಸವೇಶ್ವರ ವೃತ್ತದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಾಧಿಕಾರದ ರಿಜಿಸ್ಟ್ರಾರ್ ದತ್ತಪ್ಪ ಸಾಗನೂರ ಉಪಸ್ಥಿತರಿದ್ದರು.























