Home ಸುದ್ದಿ ರಾಷ್ಟ್ರೀಯ ಅಭಿಜೀತ್ ದೀಪ್ಕೆ ಇಂದು ನ್ಯಾಯಾಲಯಕ್ಕೆ ಹಾಜರು

ಅಭಿಜೀತ್ ದೀಪ್ಕೆ ಇಂದು ನ್ಯಾಯಾಲಯಕ್ಕೆ ಹಾಜರು

ನವದೆಹಲಿ, ಅ. ೧೭: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಮತ್ತು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ‘ಲೇಹ್ರಾ ದೋ ತಿರಂಗಾ’ ವೆಪ್ರತಿಭಟನೆಯ ಆಯೋಜಕರಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದ್ದು, ಶನಿವಾರ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.


ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಿಡುಗಡೆ ಮಾಡಲಾಗಿದೆ.ಶುಕ್ರವಾರ ಕನ್ನಾಟ್ ಪ್ಲೇಸ್‌ನಲ್ಲಿ ನಡೆಯಬೇಕಿದ್ದ ‘ಲೇಹ್ರಾ ದೋ ತಿರಂಗಾ’ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅಭಿಜೀತ್ ದೀಪ್ಕೆ ಸೇರಿದಂತೆ ೧೦೦ಕ್ಕೂ ಹೆಚ್ಚು ಮಂದಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್), ೨೦೨೩ರ ಸೆಕ್ಷನ್ ೧೨೬ ಮತ್ತು ೧೭೦ರ ಅಡಿಯಲ್ಲಿ ದೀಪ್ಕೆ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶದಲ್ಲಿರಿಸಲಾಗಿದೆ.


ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ. ನೇಹಾ ಬೋರಾ ಅವರನ್ನು ದೆಹಲಿ ಪೊಲೀಸ್ ಕಾಯ್ದೆಯ ಸೆಕ್ಷನ್ ೬೫ರ ಅಡಿಯಲ್ಲಿ ಕೈಗೊಂಡಿದ್ದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಬಿಡುಗಡೆ ಮಾಡಲಾಗಿದೆ.


ಕನ್ನಾಟ್ ಪ್ಲೇಸ್ ಹಾಗೂ ನವದೆಹಲಿಯ ಇತರ ಪ್ರದೇಶಗಳಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ ಆರೋಪದಡಿ ದೆಹಲಿ ಪೊಲೀಸರು ಹಲವು ಪ್ರಥಮ ಮಾಹಿತಿ ವರದಿಗಳನ್ನು (ಎಫ್‌ಐಆರ್) ದಾಖಲಿಸಿದ್ದಾರೆ. ಜನರು ಚದುರಿಹೋಗುವಂತೆ ಪೊಲೀಸರು ಪದೇಪದೇ ಸೂಚನೆ ನೀಡಿದರೂ ಕನ್ನಾಟ್ ಪ್ಲೇಸ್ ಸುತ್ತಮುತ್ತ ಗುಂಪು ಸೇರಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಮ್ಯಾಜಿಸ್ಟ್ರೇಟ್ ಜಾರಿಗೊಳಿಸಿದ ನಿಷೇಧಾಜ್ಞೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬಿಎನ್‌ಎಸ್‌ಎಸ್‌ನ ಸೆಕ್ಷನ್ ೧೬೩ರ ಅಡಿಯಲ್ಲಿಯೂ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಹೇಳಿದ್ದಾರೆ.


ಅಭಿಜೀತ್ ದೀಪ್ಕೆ ಅವರನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ಹಲವು ಪ್ರತಿಪಕ್ಷಗಳು ಖಂಡಿಸಿವೆ. ಅವರ ವಶದಲ್ಲಿಡುವ ಕ್ರಮ ಕಾನೂನುಬಾಹಿರ ಎಂದು ಆರೋಪಿಸಿರುವ ಪ್ರತಿಪಕ್ಷಗಳು, ಪ್ರತಿಭಟನೆ ನಡೆಸುವ ಹಕ್ಕನ್ನು ಗೌರವಿಸಬೇಕು ಎಂದು ಆಗ್ರಹಿಸಿವೆ.


ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ, ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಪ್ರತಿಪಕ್ಷಗಳು ಆಡಳಿತ ಬದಲಾವಣೆಯ ಉದ್ದೇಶದಿಂದ ರಾಜಕೀಯ ಚಟುವಟಿಕೆ ನಡೆಸುತ್ತಿವೆ ಎಂಬ ಆರೋಪವನ್ನೂ ಕೇಂದ್ರದ ಕಡೆಯಿಂದ ಮಾಡಲಾಗಿದೆ.


ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು ಸಿಇಸಿ ಜ್ಞಾನೇಶ್ ಕುಮಾರ್ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ದೇಶಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.


ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಆದರ್ಶಗಳಿಂದ ಪ್ರೇರಣೆ ಪಡೆದು ಯುವಜನರು ಹೋರಾಟ ಮುಂದುವರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ರೈತರು, ಕಾರ್ಮಿಕ ಸಂಘಟನೆಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಒಗ್ಗೂಡಿ ಬೀದಿಗಿಳಿದು ಶಾಂತಿಯುತವಾಗಿ ಪ್ರತಿಭಟಿಸಲಿವೆ ಎಂದು ಎಚ್ಚರಿಸಿದ್ದಾರೆ.


ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆ ಈಗ ರಾಜಕೀಯ ಸಂಘರ್ಷದ ಸ್ವರೂಪ ಪಡೆದುಕೊಂಡಿದ್ದು, ಅಭಿಜೀತ್ ದೀಪ್ಕೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಪ್ರಕರಣ ಯಾವ ತಿರುವು ಪಡೆಯಲಿದೆ ಎಂಬ ಕುತೂಹಲ ಮೂಡಿದೆ.