Home ಮುಖಪುಟ ಸುದ್ದಿ ಅಭಿಜೀತ್ ದೀಪ್ಕೆಗೆ ಷರತ್ತು ಬದ್ಧ ಜಾಮೀನು

ಅಭಿಜೀತ್ ದೀಪ್ಕೆಗೆ ಷರತ್ತು ಬದ್ಧ ಜಾಮೀನು

ನವದೆಹಲಿ, ಅ.17: ತಿರಂಗಾ ಮೆರವಣಿಗೆಯಲ್ಲಿ ಭಾಗವಹಿಸುವ ಮುನ್ನ ವಶಕ್ಕೆ ಪಡೆದಿದ್ದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ದೆಹಲಿ ನ್ಯಾಯಾಲಯ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.


50,000 ರೂ ಮೊತ್ತದ ಶ್ಯೂರಿಟಿ ಬಾಂಡ್ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಶಾಂತಿ ಕಾಪಾಡುವ ಬಾಂಡ್‌ಗೆ ಸಹಿ ಮಾಡಿದ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.


ದೆಹಲಿಯ ಝಂಡೇವಾಲನ್ ಪ್ರದೇಶದಲ್ಲಿರುವ ತಮ್ಮ ನಿವಾಸದಿಂದ ಶುಕ್ರವಾರ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಆಯೋಜಿಸಿದ್ದ ‘ಲಹ್ರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅಭಿಜೀತ್ ದೀಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಅಕ್ಟೋಬರ್ 10ರಂದು ಶಾಂತಿ ಕಾಪಾಡುವಂತೆ ನೀಡಿದ್ದ ಬಾಂಡ್ ಉಲ್ಲಂಘಿಸಿದ ಆರೋಪದ ಮೇಲೆ ಶನಿವಾರ ಬೆಳಗ್ಗೆ ಅವರನ್ನು ಬಂಧಿಸಲಾಗಿತ್ತು. ಬಳಿಕ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.


ಬಂಧನದ ಕಾನೂನುಬದ್ಧತೆ ಪ್ರಶ್ನೆ

ಸಿಜೆಪಿ ಪಕ್ಷದ ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಅವರು ಅಭಿಜೀತ್ ದೀಪ್ಕೆ ಬಂಧನದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ. ಮೂಲಭೂತ ಹಕ್ಕುಗಳು ಮತ್ತು ಕಾನೂನು ಪ್ರಕ್ರಿಯೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅವರು, ದೀಪ್ಕೆಯನ್ನು ತಕ್ಷಣ ಬಿಡುಗಡೆ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.


ಈ ಹಿಂದೆ ಅಕ್ಟೋಬರ್ 10ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗಿದ್ದ ದೀಪ್ಕೆಯನ್ನು ವಶಕ್ಕೆ ಪಡೆಯಲಾಗಿತ್ತು. ಆಗ ಶಾಂತಿ ಭಂಗಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಿ, ಒಂದು ವರ್ಷದವರೆಗೆ ಶಾಂತಿ ಕಾಪಾಡುವ ಭರವಸೆಯ ಬಾಂಡ್‌ಗೆ ಸಹಿ ಪಡೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.


ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ನೀಹಾ ಬೋರಾ ಅವರನ್ನು ಶನಿವಾರ ಬಿಡುಗಡೆ ಮಾಡಲಾಗಿದೆ. ದೆಹಲಿ ಪೊಲೀಸ್ ಕಾಯ್ದೆಯ ಸೆಕ್ಷನ್ 65ರ ಅಡಿಯಲ್ಲಿ ವಶಕ್ಕೆ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದ ಔಪಚಾರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


ಬಿಡುಗಡೆಯಾದ ಬಳಿಕ ನೀಹಾ ಬೋರಾ, ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ, ಬಂಧನಗಳು ಕಾನೂನುಬಾಹಿರ ಎಂದು ಆರೋಪಿಸಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.