
ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಶನಿವಾರ ದಿಢೀರ್ ದಾಳಿ ನಡೆಸಿ, ಎರಡು ಕ್ಲಿನಿಕ್ಗಳನ್ನು ಬಂದ್ ಮಾಡಿಸಿ ಸೀಲ್ಡೌನ್ ಮಾಡಿದೆ. ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
ಐಎಂಎ ಯಾದಗಿರಿ ಅಧ್ಯಕ್ಷ ಡಾ. ಚಂದ್ರಕಾಂತ ಪೂಜಾರಿ ಹಾಗೂ ಯಾದಗಿರಿ ತಾಲೂಕು ಆರೋಗ್ಯಾಧಿಕಾರಿ ಡಾ. ಹಣಮಂತರಡ್ಡಿ ಮದನಿ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು.
ಯರಗೋಳ ಗ್ರಾಮದಲ್ಲಿ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಎರಡು ಕ್ಲಿನಿಕ್ಗಳನ್ನು ಪತ್ತೆಹಚ್ಚಿದ ಅಧಿಕಾರಿಗಳು, ಅವುಗಳ ಕಾರ್ಯಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಬೀಗ ಜಡಿದಿದ್ದಾರೆ. ಅಲ್ಲದೆ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ಅಕ್ರಮ ಕ್ಲಿನಿಕ್ಗಳು ಹಾಗೂ ನಿಯಮಬಾಹಿರವಾಗಿ ವೈದ್ಯಕೀಯ ಸೇವೆ ಒದಗಿಸುವವರ ವಿರುದ್ಧ ನಿರಂತರವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.






















