
ಸಂಜೆವಾಣಿ ವಾರ್ತೆ,
ವಿಜಯಪುರ, ಅ. ೨೮: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವುದರ ಜತೆಗೆ, ನಗರದ ಬಾಗಲಕೋಟೆ ರಸ್ತೆಯ ವಜ್ರ ಹನುಮಾನ್ ರೈಲ್ವೆ ಕ್ರಾಸಿಂಗ್ ಬಳಿ ಮಂಜೂರಾಗಿರುವ ಅಂಡರ್ಪಾಸ್ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನಾ ಸಮಿತಿ ಆಗ್ರಹಿಸಿದೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಅತ್ಯಗತ್ಯವಾಗಿದೆ. ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಜಿಲ್ಲೆಯ ಜನರಿಗೆ ಸುಧಾರಿತ ಆರೋಗ್ಯ ಸೇವೆ ದೊರೆಯುವುದರ ಜತೆಗೆ, ವೈದ್ಯಕೀಯ ಶಿಕ್ಷಣದ ಅವಕಾಶಗಳೂ ಹೆಚ್ಚಲಿವೆ. ಆದ್ದರಿಂದ ಸರ್ಕಾರ ಯಾವುದೇ ವಿಳಂಬ ಮಾಡದೆ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು ಎಂದು ಸಮಿತಿ ಒತ್ತಾಯಿಸಿದೆ.
ಇದೇ ವೇಳೆ, ಬಾಗಲಕೋಟೆ ರಸ್ತೆಯ ವಜ್ರ ಹನುಮಾನ್ ರೈಲ್ವೆ ಗೇಟ್ ಬಳಿ ನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ಪರಿಹಾರಕ್ಕಾಗಿ ಈ ಹಿಂದೆ ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಮೇಲ್ಸೇತುವೆ ನಿರ್ಮಾಣ ಸಾಧ್ಯವಾಗದ ಹಿನ್ನೆಲೆಯಲ್ಲಿ ಅಂಡರ್ಪಾಸ್ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.
ಮಂಜೂರಾಗಿರುವ ಅಂಡರ್ಪಾಸ್ ಕೇವಲ ದ್ವಿಚಕ್ರ ಹಾಗೂ ಲಘು ವಾಹನಗಳ ಸಂಚಾರಕ್ಕೆ ಸೀಮಿತವಾಗದೆ, ಸಾರ್ವಜನಿಕ ಸಾರಿಗೆ ಹಾಗೂ ಭಾರಿ ವಾಹನಗಳೂ ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕವಾಗಿ ನಿರ್ಮಿಸಬೇಕು. ಕಾಮಗಾರಿ ಗುಣಮಟ್ಟದಿಂದ ಹಾಗೂ ಭವಿಷ್ಯದ ಸಂಚಾರದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ.
ಕೇಂದ್ರ ಸರ್ಕಾರ, ರೈಲ್ವೆ ಇಲಾಖೆ ಹಾಗೂ ಜನಪ್ರತಿನಿಧಿಗಳು ಈ ವಿಚಾರದಲ್ಲಿ ವಿಶೇಷ ಮುತುವರ್ಜಿ ವಹಿಸಿ, ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಅಂಡರ್ಪಾಸ್ ಕಾಮಗಾರಿಗೆ ಚಾಲನೆ ನೀಡಬೇಕು. ಸಾರ್ವಜನಿಕರು ಪ್ರತಿನಿತ್ಯ ಎದುರಿಸುತ್ತಿರುವ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ವಿಳಂಬವಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಸೇವಾ ಕಾರ್ಯಕ್ಕೆ ಸನ್ಮಾನ
ಸಾರ್ವಜನಿಕ ಹಿತರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನಾ ಸಮಿತಿಯು ನಿರಂತರವಾಗಿ ನಡೆಸುತ್ತಿರುವ ಹೋರಾಟ ಹಾಗೂ ಸೇವಾ ಕಾರ್ಯವನ್ನು ಗುರುತಿಸಿ ಕೀರ್ತಿನಗರದ ಸಮಾನ ಮನಸ್ಕರ ಸೇವಾ ಸಂಸ್ಥೆ ಹಾಗೂ ಶಿರಡಿ ಸಾಯಿಬಾಬಾ ಟ್ರಸ್ಟ್ ಪದಾಧಿಕಾರಿಗಳು ಸಮಿತಿಯ ಪದಾಧಿಕಾರಿಗಳನ್ನು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಆರ್.ಸಿ. ನಿಂಬಾಳ ಅವರನ್ನು ಗೌರವಿಸಲಾಯಿತು. ಸಂಘಟನೆಯ ಸೇವಾ ಕಾರ್ಯವನ್ನು ಗುರುತಿಸಿ ಗೌರವಿಸಿದ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹಿರಿಯರಿಗೆ ಸಮಿತಿಯ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.






















